ADVERTISEMENT

ನರೇಗಾದಡಿ ಗ್ರಾಮಗಳಲ್ಲಿ ಕ್ರೀಡಾಂಗಣ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 13 ಮೇ 2017, 8:39 IST
Last Updated 13 ಮೇ 2017, 8:39 IST

ಚಿಕ್ಕಬಳ್ಳಾಪುರ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಕ್ರೀಡಾಂಗಣ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೆ. ಮಂಜುನಾಥ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ, ಕ್ರೀಡಾ ಇಲಾಖೆ, ಕ್ರೀಡಾ ಸಂಘ ಸಂಸ್ಥೆ ಆಶ್ರಯದಲ್ಲಿ ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಜಿಲ್ಲೆಯಲ್ಲಿ ಕಳೆದ ವರ್ಷ ನರೇಗಾದಡಿ 85 ಕ್ರೀಡಾಂಗಣ ಅಭಿವೃದ್ಧಿ ಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಕ್ರೀಡಾಂಗಣ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ’ ಎಂದರು.

ADVERTISEMENT

‘ಕ್ರೀಡಾ ಚಟುವಟಿಕೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮ ರೀತಿಯಲ್ಲಿ ಇರುತ್ತದೆ. ಆದ್ದರಿಂದ ಮಕ್ಕಳನ್ನು ಚಿಕ್ಕಂದಿನಲ್ಲಿಯೇ ಕ್ರೀಡೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಜತೆಗೆ ಪ್ರತಿಯೊಂದು ಮಗುವಿನೊಳಗೆ ಒಂದೊಂದು ಪ್ರತಿಭೆ ಇರುತ್ತದೆ. ಅದಕ್ಕೆ ಪೂರಕವಾಗಿ ಅವರಿಗೆ ಪ್ರೋತ್ಸಾಹ ನೀಡಬೇಕು’ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಿ. ರುದ್ರಪ್ಪ ಮಾತನಾಡಿ, ‘ಬೇಸಿಗೆ ಶಿಬಿರದಲ್ಲಿ ಸುಮಾರು ೧೪೦ ಮಕ್ಕಳು ಭಾಗವಹಿಸಿದ್ದರು. ಶಿಬಿರದಲ್ಲಿ ಮಕ್ಕಳಿಗೆ ಈಜು, ಹಾಕಿ ಮತ್ತು ಬ್ಯಾಡ್ಮಿಂಟನ್ ತರಬೇತಿ ನೀಡಲಾಯಿತು’ ಎಂದು ಹೇಳಿದರು. 

ಶಿಬಿರದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಶಿಬಿರದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಪಿಎಂಸಿ ನಿರ್ದೇಶಕ ಮಿಲ್ಟನ್ ವೆಂಕಟೇಶ್, ಹಾಕಿ ತರಬೇತುದಾರ ಮುಸ್ತಾಕ್ ಅಹಮದ್, ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ರಮೇಶ್,  ದೈಹಿಕ ಶಿಕ್ಷಣ ಅಧೀಕ್ಷಕ ಶಿವರುದ್ರಪ್ಪ, ತರಬೇತುದಾರ ಪುಂಡಲೀಕ, ಶಿವಕುಮಾರ್, ಮಾರುತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.