ADVERTISEMENT

ಪಿಡಬ್ಲ್ಯುಡಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2017, 10:00 IST
Last Updated 22 ಜೂನ್ 2017, 10:00 IST

ಬಾಗೇಪಲ್ಲಿ: ‘ಪಟ್ಟಣದಿಂದ ರಾಷ್ಟ್ರೀಯ ಹೆದ್ದಾರಿ 7ಕ್ಕೆ ಸಂಪರ್ಕ ಕಲ್ಪಿಸುವ ಟಿಬಿ ಕ್ರಾಸ್ ರಸ್ತೆ ವರ್ಷದಿಂದ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದರೂ ಅವೈಜ್ಞಾನಿಕವಾಗಿ ಕಾಮಗಾರಿ ನಡೆಯುತ್ತಿದ್ದರೂ ಅಧಿಕಾರಿಗಳು ಸಂಬಂಧವಿಲ್ಲದಂತೆ ಮೌನವಹಿಸಿದ್ದಾರೆ’ ಎಂದು ಕರ್ನಾಟಕದ ರಕ್ಷಣ ವೇದಿಕೆ ತಾಲ್ಲೂಕು ಅಧ್ಯಕ್ಷ ಕೆ.ಎನ್.ಹರೀಶ್ ದೂರಿದರು.

‘ರಸ್ತೆ ಕಾಮಗಾರಿ ಮಾಡಲು ಗುತ್ತಿಗೆದಾರರು ಪ್ರಭಾವಿ ವ್ಯಕ್ತಿಗಳ ಪ್ರಭಾವಕ್ಕೆ ಒಳಗಾಗಿ ರಸ್ತೆ ಕಾಮಗಾರಿ ಪಾರದರ್ಶಕವಾಗಿ ನಡೆಸಿಲ್ಲ, ಕಾಟಾಚಾರಕ್ಕೆ ರಸ್ತೆ ಕಾಮಗಾರಿ ನಡೆಸಿದ್ದಾರೆ, ₹ 4.5 ಕೋಟಿಯಷ್ಟು ಹಣ ಬಿಡುಗಡೆಯಾಗಿದ್ದರೂ ರಸ್ತೆ ಕಾಮಗಾರಿ ಸರಿಯಾಗಿ ನಡೆದಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಶಾಮೀಲಾಗಿ ಸರ್ಕಾರದ ಕೋಟ್ಯಂತರ ಹಣವನ್ನು ದುರುಪಯೋಗ ಮಾಡಿದ್ದಾರೆ’ ಎಂದು ಅವರು ದೂರಿದರು.

ADVERTISEMENT

‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ರಸ್ತೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಸ್ತೆಯಲ್ಲಿಯೇ ಧರಣಿ ಮಾಡಲಾಗುವುದು’ ಎಂದು ಎಚ್ಚರಿಸಿದರು. ಹರೀಶ್ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹಮ್ಮದ್ ಜಾಫರ್ ಸಾಧಿಕ್ ಪ್ರತಿಕ್ರಿಯಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕೂಡಲೇ ಚರ್ಚಿಸಿ ರಸ್ತೆ ಕಾಮಗಾರಿಯನ್ನು ಶೀಘ್ರವೇ ವೈಜ್ಞಾನಿಕವಾಗಿ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಮುಖಂಡರಾದ ಸುಜಾತಮ್ಮ, ಶಾಂತಮ್ಮ, ರಾಮಿರೆಡ್ಡಿ, ಜಬೀವುಲ್ಲಾ, ನಟರಾಜ್, ರಾಧಮ್ಮ, ಶ್ರೀನಿವಾಸ, ಗಂಗಾಧರ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.