ADVERTISEMENT

ಸಿಪಿಎಂ ಕಾರ್ಯಕರ್ತರಿಂದ ಪ್ರತಿಭಟನೆ

ನೋಟು ರದ್ದತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ನೀಡುವಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2017, 6:02 IST
Last Updated 14 ಫೆಬ್ರುವರಿ 2017, 6:02 IST
ಚಿಕ್ಕಬಳ್ಳಾಪುರದ ತಾಲ್ಲೂಕು ಕಚೇರಿ ಎದುರು ಸೋಮವಾರ ಸಿಪಿಎಂ ಕಾರ್ಯಕರ್ತರು ನೋಟು ರದ್ದತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಚಿಕ್ಕಬಳ್ಳಾಪುರದ ತಾಲ್ಲೂಕು ಕಚೇರಿ ಎದುರು ಸೋಮವಾರ ಸಿಪಿಎಂ ಕಾರ್ಯಕರ್ತರು ನೋಟು ರದ್ದತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು   
ಚಿಕ್ಕಬಳ್ಳಾಪುರ: ನೋಟು ರದ್ದತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ನಗರದಲ್ಲಿರುವ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. 
 
ಈ ವೇಳೆ ಮಾತನಾಡಿದ ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಜನರ ಸಂಕಷ್ಟಗಳನ್ನು ಪರಿಹರಿಸುವ ಬದಲು ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದುಪಡಿಸುವ ಮೂಲಕ ಮತ್ತಷ್ಟು ಕಷ್ಟಕ್ಕೆ ಸಿಲುಕಿಸಿದ್ದಾರೆ’ ಎಂದು ಹೇಳಿದರು. 
 
‘ವಿದೇಶದಲ್ಲಿರುವ ಕಪ್ಪುಹಣ ವಾಪಸ್‌ ತರಲಾಗದ ಮೋದಿ ನೋಟು ರದ್ದತಿಯ ಮೂಲಕ ಜನರ ಗಮನ ಬೇರೆಡೆ ಸೆಳೆದರು. ಕಾರ್ಪೊರೇಟ್ ಸಂಸ್ಥೆಗಳ ವಕ್ತಾರನಂತೆ ಕೆಲಸ ಮಾಡುತ್ತಿರುವ ಪ್ರಧಾನಿಯವರು ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಭರದಲ್ಲಿ ಬಡವರಿಗೆ ತೀವ್ರ ತೊಂದರೆ ಮಾಡಿದ್ದಾರೆ. ಈ ಜನವಿರೋಧಿ ನೀತಿಯಿಂದ ಬೇಸತ್ತ ಜನರು ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.
 
‘ನಗದು ರಹಿತ ವಹಿವಾಟಿನ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕೇಂದ್ರ ಸರ್ಕಾರ ಆ ಮೂಲಕ ಪೇಟಿಎಂ, ಎಸ್‌ಬ್ಯಾಂಕ್, ಜಿಯೋ ಮನಿಯಂತಹ ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುತ್ತಿದೆ. ಜನಸಾಮಾನ್ಯರ ತೆರಿಗೆ ಹಣವನ್ನು ಕಾರ್ಪೊರೇಟ್ ಕಂಪೆನಿಗಳಿಗೆ ಸಾಲ ನೀಡಿ, ಅದನ್ನು ಮನ್ನಾ ಮಾಡುವ ಸರ್ಕಾರ ಬಡ ರೈತರ ಸಾಲ ಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
‘ರಾಜ್ಯ ತೀವ್ರ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಕೃಷಿ ಚಟುವಟಿಕೆಗಳು ಏರುಪೇರಾಗಿ ಜನ ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಬರ ಪರಿಹಾರ ಹಣವನ್ನು ನೀಡುತ್ತಿಲ್ಲ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಕೇಂದ್ರ ಕೂಡಲೆ ರಾಜ್ಯಕ್ಕೆ ಅಗತ್ಯ ಸಹಾಯ ಮಾಡಬೇಕು’ ಎಂದು ಒತ್ತಾಯಿಸಿದರು.
 
ಸಿಪಿಎಂ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ,‘ಬರವಿರುವ ಕಾರಣ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಕೆಲಸ ನೀಡಬೇಕು. ಈ ಭಾಗದ ರೈತರ ಸಾಲವನ್ನು ಕೂಡಲೇ ಸಂಪೂರ್ಣ ಮನ್ನಾ ಮಾಡಬೇಕು. ಬರದ ಕಾರಣದಿಂದ ಕೆಲಸ ಕಳೆದುಕೊಂಡಿರುವ ಕೃಷಿ ಕೂಲಿಕಾರರಿಗೆ ಜೀವನ ನಿರ್ವಹಣೆಗೆ ಆರ್ಥಿಕ ಸಹಾಯ ಮಾಡಬೇಕು’ ಎಂದರು.
 
‘ಬರ ಸಂದರ್ಭದಲ್ಲಿ ಬಡ ಜನರು ಸರ್ಕಾರ ನೀಡುವ ಪಡಿತರ ಧಾನ್ಯಗಳ ಮೇಲೆ ಅವಲಂಬಿತರಾಗಿರುತ್ತಾರೆ. ಆದರೆ ಪಡಿತರ ಕಾರ್ಡ್‌ಗೆ ಆಧಾರ್‌ ಸಂಖ್ಯೆ ಜೋಡಿಸುವುದನ್ನು ಕಡ್ಡಾಯಗೊಳಿಸಿದ ಪರಿಣಾಮ ಬಹಳಷ್ಟು ಕುಟುಂಬಗಳು ಪಡಿತರದಿಂದ ವಂಚಿತವಾಗುತ್ತಿವೆ. ಆಹಾರ ಸರಬರಾಜು ಇಲಾಖೆ ಕೂಡಲೇ ಈ ಷರತ್ತನ್ನು ಹಿಂದಕ್ಕೆ ಪಡೆದು ಪ್ರತಿಯೊಬ್ಬ ಪಡಿತರ ಕಾರ್ಡ್‌ದಾರರಿಗೆ ಧಾನ್ಯಗಳನ್ನು ವಿತರಿಸಬೇಕು’ ಎಂದು ಆಗ್ರಹಿಸಿದರು. ಸಿಪಿಎಂ ಮುಖಂಡರಾದ ರಾಮಚಂದ್ರ, ರಾಮಕೃಷ್ಣ, ಸೋಮು ಮತ್ತಿತರರು ಭಾಗವಹಿಸಿದ್ದರು.
 
* ಬ್ಯಾಂಕಿನಲ್ಲಿರುವ ಹಣ ವಾಪಸ್ ಪಡೆಯಲು ವಿಧಿಸಿರುವ ನಿರ್ಬಂಧವನ್ನು ಕೇಂದ್ರ ಸರ್ಕಾರ ಕೂಡಲೇ ತೆಗೆದುಹಾಕಬೇಕು. ಬ್ಯಾಂಕ್‌ ಸರದಿಯಲ್ಲಿ ನಿಂತು ಸತ್ತವರ ಕುಟುಂಬಗಳಿಗೆ ಪರಿಹಾರ ನೀಡಬೇಕು.
ಎಂ.ಪಿ.ಮುನಿವೆಂಕಟಪ್ಪ,  ಸಿಪಿಎಂ ಜಿಲ್ಲಾ ಕಾರ್ಯದರ್ಶಿ
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.