ADVERTISEMENT

ಸ್ವಚ್ಛತೆ ಕಾಪಾಡಿ, ಡೆಂಗಿ ಕಾಯಿಲೆ ದೂರವಿಡಿ

​ಪ್ರಜಾವಾಣಿ ವಾರ್ತೆ
Published 24 ಮೇ 2017, 6:44 IST
Last Updated 24 ಮೇ 2017, 6:44 IST

ಚಿಕ್ಕಬಳ್ಳಾಪುರ: ‘ಮಳೆಗಾಲದ ಸಂದರ್ಭದಲ್ಲಿ ಸೊಳ್ಳೆಗಳಿಂದ ಹರಡುವ ಮಾರಣಾಂತಿಕ ಡೆಂಗಿ ಕಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಮನೆ ಪರಿಸರ ಸ್ವಚ್ಛವಾಗಿಟ್ಟುಕೊಂಡು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಜೆ. ಮಂಜುನಾಥ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ರಾಷ್ಟ್ರೀಯ ಡೆಂಗಿ ಜ್ವರ ವಿರೋಧಿ ದಿನಾಚರಣೆ’ ಜಾಗೃತಿ ಜಾಥಾಗೆ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

‘ಮುಂಗಾರು ಆರಂಭವಾಗುತ್ತಿದೆ. ಇನ್ನು ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ನಿಂತ ನೀರಿನಲ್ಲಿ ಸೊಳ್ಳೆ ಸಂತತಿ ಹೆಚ್ಚುವುದು ಇಂತಹ ಕಾಯಿಲೆಗಳ ಉಲ್ಭಣಕ್ಕೆ ಕಾರಣವಾಗುತ್ತದೆ. ಆದ್ದರಿಂದ ನಾಗರಿಕರು ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಹತೋಟಿಯೇ ಡೆಂಗಿ ಜ್ವರದ ನಿಯಂತ್ರಣದ ಮುಖ್ಯ ವಿಧಾನವಾಗಿದೆ. ಮನೆಯಲ್ಲಿರುವ ಡ್ರಮ್‌ಗಳು, ಬ್ಯಾರಲ್‌, ಮಡಿಕೆಗಳು, ಟೈರ್‌ಗಳು, ತೆಂಗಿನ ಚಿಪ್ಪು ಹೀಗೆ ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಡೆಂಗಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಾಗ ನಾಗರಿಕರು ಸರ್ಕಾರಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜ್ವರ ಇರುವುದು ಖಚಿತವಾದರೆ ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ ಮತ್ತು ಈ ವರ್ಷದಲ್ಲಿ ಈವರೆಗೆ ಡೆಂಗಿ ಜ್ವರದಿಂದ ಮರಣ ಸಂಭವಿಸಿದ ವರದಿಯಾಗಿಲ್ಲ. ಕಾಯಿಲೆ ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬರದಂತೆ ತಡೆಗಟ್ಟುವುದೇ ಉತ್ತಮ ಮಾರ್ಗ ಇದೇ ಆಗಿದ್ದರಿಂದ ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕಿದೆ. ಕಡ್ಡಾಯವಾಗಿ ಗ್ರಾಮಗಳಲ್ಲಿ ವಾರದ ಒಣಗಲು ದಿನ ಆಚರಿಸಬೇಕು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರವಿಶಂಕರ್‌ ಮಾತನಾಡಿ, ‘ವೈರಸ್‌ನಿಂದ ಬರುವ ಡೆಂಗಿ ಜ್ವರ ಈಡೀಸ್ ಇಜಿಪ್ಟೈ ಸೊಳ್ಳೆ ಕಚ್ಚಿದರೆ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛ ನೀರಿನಲ್ಲಿ ವಾಸ ಮಾಡುವ ಈ ಸೊಳ್ಳೆ ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತದೆ. ಆದ್ದರಿಂದ ಸೊಳ್ಳೆ ಸಂತಾನ ತಡೆಗಟ್ಟುವ ನಿಟ್ಟಿನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಅಗತ್ಯ’ ಎಂದು ತಿಳಿಸಿದರು.

‘ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳು ಮತ್ತು ಕೀಲುಗಳಲ್ಲಿ ನೋವು, ಬಾಯಿ, ಮೂಗು, ವಸಡುಗಳಿಂದ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳುವುದು ಡೆಂಗಿ ರೋಗದ ಲಕ್ಷಣಗಳು. ಇವು ಕಂಡಬಂದ ತಕ್ಷಣವೇ ನಾಗರಿಕರು ಆಸ್ಪತ್ರೆಗೆ ಹೋಗಿ ರಕ್ತ ಪರೀಕ್ಷೆ ಮಾಡಿಸಿಕೊಂಡು, ಸೂಕ್ತ ಚಿಕಿತ್ಸೆ ಪಡೆಯಬೇಕು. ಸುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನಿಗಾ ವಹಿಸುವ ಜತೆಗೆ ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳು, ಸೊಳ್ಳೆ ಪರದೆಗಳನ್ನು ಬಳಸುವ ಮೂಲಕ ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸಬೇಕು’ ಹೇಳಿದರು.

ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ‘ಡೆಂಗಿ ಮುಕ್ತ ಸಮುದಾಯ ನಮ್ಮದಾಗಲಿ’, ‘ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿ’, ‘ನೀರು ನಿಲ್ಲದಂತೆ ಎಚ್ಚರ ವಹಿಸಿ–ಡೆಂಗಿ ಜ್ವರದಿಂದ ಪಾರಾಗಿ’, ‘ಸೊಳ್ಳೆ ಪರದೆ ಬಳಸಿ–ರೋಗದಿಂದ ಮುಕ್ತರಾಗಿ’ ಎಂಬ ಘೋಷಣೆ ಕೂಗಿದರು. ವಾಹನ ಮೂಲಕ ಕೂಡ ಪ್ರಚಾರ ಕಾರ್ಯ ನಡೆಸಲಾಯಿತು.ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವಿಜಯಕುಮಾರ್, ಜಿಲ್ಲಾ ಮಲೇರಿಯಾ ಅಧಿಕಾರಿ ಗಂಗಾಧರ್, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.