ADVERTISEMENT

ಸ್ವಸಹಾಯ ಗುಂಪುಗಳಿಗೆ ₹ 3.22 ಕೋಟಿ ಸಾಲ ವಿತರಣೆ

ಸ್ತ್ರೀ ಶಕ್ತಿ ಸಂಘಗಳಿಗೆ ಬಡ್ಡಿ ರಹಿತ ಸಾಲ ನೀಡಲು ಚಿಂತನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2017, 7:40 IST
Last Updated 9 ಮಾರ್ಚ್ 2017, 7:40 IST
ಚಿಕ್ಕಬಳ್ಳಾಪುರ: ನಗರದಲ್ಲಿ ಬುಧವಾರ ಡಿಸಿಸಿ ಬ್ಯಾಂಕ್ ಹಾಗೂ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್‌ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯ ಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ 90 ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಗುಂಪುಗಳಿಗೆ  ₹ 3.22 ಕೋಟಿ ಸಾಲ ವಿತರಣೆ ಮಾಡಲಾಯಿತು. 
 
ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ, ‘ಮಹಿಳೆಯರಿಗೆ ಆರ್ಥಿಕ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ನೀಡಲು ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಬಜೆಟ್‌ನಲ್ಲಿ ಈ ವಿಚಾರ ಮಂಡಿಸಲಿದ್ದಾರೆ’ ಎಂದು ತಿಳಿಸಿದರು.
 
‘ಸದ್ಯ ಸ್ವಸಹಾಯ ಗುಂಪುಗಳಿಗೆ ಕೇವಲ ₹ 33 ಪೈಸೆ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಸರ್ಕಾರ ಬಡ್ಡಿ ರಹಿತ ಸಾಲ ವಿತರಣೆ ಮಾಡಲು ಉದ್ದೇಶಿಸಿದೆ. ಸಾಲ ಪಡೆದವರು ಕೂಡ ಪ್ರಾಮಾಣಿಕತೆಯಿಂದ ಮರುಪಾವತಿಸಬೇಕು. ಶಾಸಕ ಡಾ.ಕೆ. ಸುಧಾಕರ್ ಅವರು ನೇತೃತ್ವ ವಹಿಸಿದಲ್ಲಿ ಕ್ಷೇತ್ರದ ಎಲ್ಲ ಬಿಪಿಎಲ್ ಕಾರ್ಡ್‌ ಹೊಂದಿರುವ ಕುಟುಂಬದ ಮಹಿಳೆಯರಿಗೆ ತಲಾ ₹ 50 ಸಾವಿರ ಸಾಲ ನೀಡಲು ನಾವು ಸಿದ್ದವಿದ್ದೆವೆ’ ಎಂದರು. 
 
ಶಾಸಕ ಡಾ.ಕೆ. ಸುಧಾಕರ್ ಮಾತನಾಡಿ, ‘ಸಾಧನೆ ಪುರುಷರಿಗೆ ಮಾತ್ರ ಸೀಮಿತವಲ್ಲ. ಸಮಾನವಾದ ಅವಕಾಶಗಳು ದೊರೆತರೆ ಮಹಿಳೆಯರೂ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಮೈಲಿಗಲ್ಲನ್ನು ಸ್ಥಾಪಿಸುತ್ತಾರೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಉದ್ದೇಶದಿಂದ ನನ್ನ ಕ್ಷೇತ್ರದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವುದನ್ನು ಸವಾಲಾಗಿ ಸ್ವೀಕರಿಸಿದ್ದೇನೆ’ ಎಂದು ಹೇಳಿದರು. ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್‌ನಿಂದ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಗುಂಪುಗಳ ಸದಸ್ಯರಿಗೆ ಯುಗಾದಿ ಉಡುಗೊರೆಯಾಗಿ ಸೀರೆ ವಿತರಣೆ ಮಾಡಲಾಯಿತು.
 
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಂ. ಮುನಿಯಪ್ಪ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ನಗರಸಭೆ ಮಾಜಿ ಅಧ್ಯಕ್ಷೆ ಲೀಲಾವತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮಸ್ವಾಮಿ, ಉಪಾಧ್ಯಕ್ಷೆ ಇಂದಿರಮ್ಮ, ನಗರಸಭಾ ಸದಸ್ಯೆ ಪದ್ಮಮ್ಮ, ಭಾರತಿ, ಗೋವಿಂದಸ್ವಾಮಿ, ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀರಾಮರೆಡ್ಡಿ, ನರಸಿಂಹರೆಡ್ಡಿ ಉಪಸ್ಥಿತರಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.