ADVERTISEMENT

ಕೈಗಾರಿಕೆ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 9:02 IST
Last Updated 23 ಸೆಪ್ಟೆಂಬರ್ 2017, 9:02 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಮುಂದಾಗುವ ಯುವಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ತಿಳಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕೈಗಾರಿಕಾ ಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೈಗಾರಿಕೆಗಳನ್ನು ಸ್ಥಾಪಿಸಲು ಜಿಲ್ಲೆಯಲ್ಲಿ ವಿಫುಲ ಅವಕಾಶಗಳು ಇವೆ. ಕೈಗಾರಿಕೆಗಳ ಸ್ಥಾಪನೆಗೆ ಆಸಕ್ತಿ ತೋರುವ ಯುವಜನರಿಗೆ ಅಧಿಕಾರಿಗಳು ಸವಲತ್ತುಗಳನ್ನು ಒದಗಿಸಬೇಕು. ಅಗತ್ಯ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಇತರ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಕೈಗಾರಿಕೆಗಳು ಕಡಿಮೆ ಇವೆ. ಕೈಗಾರಿಕೆಗಳ ಸ್ಥಾಪನೆಯಾದರೆ ಯುವಜನರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ. ಆರ್ಥಿಕ ಪ್ರಗತಿಯಾಗುತ್ತದೆ ಎಂದರು.

ADVERTISEMENT

ಕಡೂರಿನ ನಗದಿಯಾತ್ ಕಾವಲಿನಲ್ಲಿ 236 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ 7 ವರ್ಷಗಳ ಹಿಂದೆಯೇ ಗುರುತಿಸಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು ಅದನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿಲ್ಲ. ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಶ್ವ ಯೋಜನೆಯಡಿ ಕೈಗಾರಿಕೆಗಳ ಸ್ಥಾಪನೆಗೆ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಸಮಸ್ಯೆ ಸರಿಪಡಿಸಲು ಮುಂದಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಬಳೆ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ, ಚರಂಡಿ ಸೌಕರ್ಯಗಳ ಕೊರತೆಗಳಿವೆ ಎಂಬ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು, ಸ್ಥಳ ಪರಿಶೀಲನೆ ಕ್ರಮ ಕೈಗೊಳ್ಳುವಂತೆ ನಗರಸಭೆ ಕಿರಿಯ ಎಂಜಿನಿಯರ್‌ಗೆ ಸೂಚನೆ ನೀಡಿದರು.

ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕರು ಮಳಿಗೆಗಳನ್ನು ಬಾಡಿಗೆ ಪಡೆದಿದ್ದಾರೆ. ಕೈಗಾರಿಕೆಗಳನ್ನು ಸ್ಥಾಪನೆ ಮಾಡಿಲ್ಲ. ಈ ಬಗ್ಗೆ ಪರಿಶೀಲಿಸಿ ಹೊಸದಾಗಿ ಕೈಗಾರಿಕೆ ಸ್ಥಾಪಿಸಲು ಮುಂದಾದವರಿಗೆ ನೀಡಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ವಾಣಿಜ್ಯ ಸಂಘದ ಪರಮೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದರು.
ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹಂತೇಶ್ ಕರೂರು ಮಾತನಾಡಿ, ‘ಜಿಲ್ಲೆಯಲ್ಲಿ ಕೈಗಾರಿಕೆ ವಿಸ್ತರಣೆಗೆ ಇರುವ ಸಮಸೈಗಳ ಬಗ್ಗೆ ಸಭೆಯಲ್ಲಿ ಮಾಹಿತಿಗಳು ದೊರೆತಿವೆ. ಅವುಗಳನ್ನು ನೀಗಿಸಲು ಕ್ರಮ ವಹಿಸಲಾಗುವುದು’ ಎಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್, ಲೈಫ್‌ಲೈನ್ ಪ್ರೈವೆಟ್‌ ಫೀಡ್ಸ್ ಲಿಮಿಟೆಡ್ ಮಾಲೀಕ ಕಿಶೋರ್ ಹೆಗ್ಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.