ADVERTISEMENT

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮತ್ತೆ ಶಿಫಾರಸು: ಚೈತ್ರಶ್ರೀ

ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಅಕ್ರಮ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2017, 7:26 IST
Last Updated 25 ಮಾರ್ಚ್ 2017, 7:26 IST

ಚಿಕ್ಕಮಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಅಕ್ರಮ ಎಸಗಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವ ಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮತ್ತೊಮ್ಮೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ. ಎಸ್‌.ಚೈತ್ರಶ್ರೀ ಮಾಲತೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಸಾಮಾನ್ಯಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ ತಪ್ಪಿತಸ್ಥ ಅಧಿಕಾರಿ ಎಸ್‌.ಜಿ.ನಾಗೇಶ್‌ ಮತ್ತು ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆಯು ವಂತೆ ಜನವರಿ 13ರಂದೇ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹ ಣಾಧಿಕಾರಿ ಡಾ.ಆರ್‌.ರಾಗಪ್ರಿಯ ಅವ ರಿಗೆ ಟಿಪ್ಪಣಿ ನೀಡಲಾಗಿತ್ತು.

ಅದರಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಈ ಪ್ರಕರಣವನ್ನು ರಾಜ್ಯಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಜ.16ರಂದು ಆಯುಕ್ತ ರಿಗೆ ಪತ್ರ ಬರೆದು ಶಿಫಾರಸು ಮಾಡಿದ್ದಾರೆ. ಆದರೆ, ಈವರೆಗೂ ರಾಜ್ಯ ಸರ್ಕಾರ ಇದಕ್ಕೆ ಸೂಕ್ತವಾಗಿ ಸ್ಪಂದಿಸಿಲ್ಲ. ಅಧಿಕಾರಿಗಳನ್ನು ಕಳುಹಿಸಿ ತನಿಖೆ ನಡೆಸಿಲ್ಲ ಎಂದು ದೂರಿದರು.

ಹೆಚ್ಚುವರಿ ಶಿಕ್ಷಕರ ವರ್ಗಾವಣೆ/ ಕೌನ್ಸಿಲಿಂಗ್‌ನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ಪ್ರಾಥಮಿಕ ವರದಿ ನೀಡಲು ಸಾರ್ವಜ ನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು (ಆಡಳಿತ), ಸಹ ನಿರ್ದೇಶಕರಿಗೆ (ಶಾಲಾ ಶಿಕ್ಷಣ) ಕಳೆದ ಫೆಬ್ರುವರಿ 6ರಂದು ಆದೇಶ ನೀಡಿದ್ದರು.

ಆದರೂ ಈವರೆಗೆ ಸಹನಿರ್ದೇಶಕರು ವಿಚಾರಣೆ ನಡೆಸಿಲ್ಲ. ಲೋಪ ಎಸಗಿರುವ ಕ್ಷೇತ್ರ ಶಿಕ್ಷಣಾಧಿಕಾ ರಿಗಳು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಂಡು, ತಕ್ಷಣ ಇವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಕೋರಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಇದೇ 22ರಂದು ಮತ್ತೆ ಪತ್ರ ಬರೆದಿದ್ದಾರೆ ಎಂದು ಚೈತ್ರಶ್ರೀ ದಾಖಲೆ ಬಿಡುಗಡೆ ಮಾಡಿದರು.

‘ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಜಿಲ್ಲಾ ಪಂಚಾಯಿತಿ ಅಥವಾ ತಾನು ಮೌನ ವಹಿಸಿಲ್ಲ. ಜನವರಿಯಲ್ಲಿ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ಮರು ಹೊಂದಾಣಿಕೆ ಮಾಡಿದಲ್ಲಿ ಶೈಕ್ಷಣಿಕ ಕಲಿಕೆಗೆ ತೊಂದರೆಯಾಗುತ್ತದೆ. ಜತೆಗೆ ವಿದ್ಯಾರ್ಥಿಗಳಿಗಳಿಗೆ ಪರೀಕ್ಷೆ ಹತ್ತಿರವಿರು ವುದರಿಂದ ಕೌನ್ಸಿಲಿಂಗ್‌/ ವರ್ಗಾವಣೆ ಪ್ರಕ್ರಿಯೆ ಮುಂದೂಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರಕ್ರಿಯೆ ನಡೆಸಬೇಕು.

ADVERTISEMENT

ತ್ರಿಸದಸ್ಯ ಸಮಿತಿಯ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಿರುವಂತಹ 10 ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಗುರುತಿಸದೆ ಅವರು ಕರ್ತವ್ಯ ನಿರ್ವಹಿಸು ತ್ತಿರುವ ಸ್ಥಳದಲ್ಲಿಯೇ ಮುಂದುವರಿಸ ಬೇಕು.

ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗಿರುವ ಲೋಪಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಶಿಕ್ಷಣ ಇಲಾಖೆಯೊಂದಿಗೆ ಪತ್ರ ವ್ಯವ ಹಾರ ನಡೆಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಟಿಪ್ಪಣಿ ನೀಡಲಾಗಿದೆ’ ಎಂದು ದಾಖಲೆ ಪತ್ರ ತೋರಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜಿ.ಸೋಮಶೇಖರ್‌, ಉಪ ಕಾರ್ಯದರ್ಶಿ ರಾಜಗೋಪಾಲ್‌ ಇದ್ದರು.

*
ಗ್ರೇಡ್‌–1 ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯಿತಿ ಹಂತದಲ್ಲಿ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.
-ಬಿ.ಎಸ್‌.ಚೈತ್ರಶ್ರೀ ಮಾಲತೇಶ್‌,
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.