ADVERTISEMENT

‘ಮಹಿಳೆಯರ ಮೇಲಿನ ದುಷ್ಕೃತ್ಯ ತಡೆಗಟ್ಟಿ’

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2017, 8:41 IST
Last Updated 23 ಆಗಸ್ಟ್ 2017, 8:41 IST

ಚಿತ್ರದುರ್ಗ: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದುಷ್ಕೃತ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಘಟಕದ ಕಾರ್ಯಕರ್ತೆಯರು ಚಿತ್ರದುರ್ಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅತ್ಯಾಚಾರ ಆದಾಗ ಮಹಿಳೆಯರು, ಯುವತಿಯರು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದ್ದರಿಂದ ಅತ್ಯಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು. ಶಾಲಾ – ಕಾಲೇಜುಗಳಲ್ಲಿ ಚುಡಾಯಿಸುವ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೃಶ್ಯ ಮಾಧ್ಯಮಗಳಲ್ಲಿ ಅಶ್ಲೀಲತೆ ಹರಡುವುದನ್ನು ತಪ್ಪಿಸಬೇಕು. ಶೈಕ್ಷಣಿಕ ಸಂಸ್ಥೆಗಳು ಹಾಗೂ ಉದ್ಯೋಗ ಸ್ಥಳಗಳಲ್ಲಿ ನಡೆಯುವ ಲೈಂಗಿಕ ಕಿರುಕುಳ ವಿರುದ್ಧ ಪರಿಹಾರ ಒದಗಿಸಲು ಸಮಿತಿಗಳ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಜೆ.ಎಸ್.ವರ್ಮಾ ಸಮಿತಿಯ ಶಿಫಾರಸು ಅನುಷ್ಠಾನಗೊಳಿಸಬೇಕು. ಎಲ್ಲಾ ಜಿಲ್ಲೆಗಳಲ್ಲೂ ಒಂದೊಂದು ತ್ವರಿತಗತಿ ನ್ಯಾಯಾಲಯ ಸ್ಥಾಪಿಸುವುದರ ಜತೆಗೆ ಅಗತ್ಯ ಸಿಬ್ಬಂದಿ, ಪರಿಕರಗಳನ್ನು ಒದಗಿಸಬೇಕು. ಪೋಕ್ಸೊ ಕಾಯ್ದೆಯಡಿ ಮಕ್ಕಳ ಮೇಲಾಗುವ ಅಪರಾಧ ಶೀಘ್ರ ವಿಚಾರಣೆಗೆ ಒಳಪಡಿಸಬೇಕು ಎಂದರು.

ಸಂಘಟನೆಯ ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿ ಕೆ.ಚೇತನಾ, ಜಿಲ್ಲಾ ಸಂಚಾಲಕಿ ಸುಜಾತಾ, ಸಹ ಸಂಚಾಲಕಿ ರೂಪಾ, ತ್ರಿವೇಣಿ ಸೇನ್, ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿನಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.