ADVERTISEMENT

‘ಶೇಂಗಾಕ್ಕೆ ಬೆಂಬಲ ಬೆಲೆ ನಿಗದಿಪಡಿಸಿ’

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2017, 5:51 IST
Last Updated 9 ನವೆಂಬರ್ 2017, 5:51 IST

ಚಿತ್ರದುರ್ಗ: ಶೇಂಗಾ ಬೆಳೆಗೆ ಬೆಲೆ ಕುಸಿದಿದ್ದು, ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ ಬೆಲೆ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ ಎಂದು ರೈತರ ಸಮಸ್ಯೆಯನ್ನು ತಿಳಿಸಿದರು.

ಐದು ವರ್ಷಗಳಿಂದಲೂ ಉತ್ತಮ ಮಳೆ ಇಲ್ಲದ ಪರಿಣಾಮ ಈ ಭಾಗದ ರೈತರು ಶೇಂಗಾ ಬೆಳೆದಿಲ್ಲ. ಈಚೆಗೆ ಸುರಿದ ಮಳೆಯಿಂದ ಶೇಂಗಾ ಬೂದಿ ಮತ್ತು ಕೊಳವೆ ರೋಗಕ್ಕೆ ತುತ್ತಾಗಿ ಇಳುವರಿ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆಗೆ ಹೋದರೆ, ಅಲ್ಲಿಯೂ ಟೆಂಡರ್ ಪ್ರಕ್ರಿಯೆ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು.

ADVERTISEMENT

ಮಹಾರಾಷ್ಟ್ರ, ತಮಿಳುನಾಡಿನ ವ್ಯವಸಾಯ ಸೇವಾ ಸಹಕಾರ ಸಂಘದವರನ್ನು ಮಾರುಕಟ್ಟೆಗೆ ಆಹ್ವಾನಿಸುವ ಮೂಲಕ ಈ ಭಾಗದ ರೈತರ ಪರಿಸ್ಥಿತಿ ಮನವರಿಕೆ ಮಾಡಿ ಹೆಚ್ಚಿನ ಬೆಲೆ ಸಿಗುವಂತೆ ಮಾಡಬೇಕು. ಈ ಮೂಲಕ ರೈತರಿಗೆ ನೆರವಾಗಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು. ರೈತ ಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಆರ್.ಎ.ದಯಾನಂದಮೂರ್ತಿ, ಜಿ.ಎಚ್.ತಿಪ್ಪೇಸ್ವಾಮಿ, ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.