ADVERTISEMENT

ಸರ್ಕಾರದ ಸೌಲಭ್ಯ ಪಡೆದು ಪ್ರಗತಿ ಸಾಧಿಸಿ

ಜಿಲ್ಲಾ ಪಂಚಾಯ್ತಿ ಸದಸ್ಯ ಟಿ.ಮುತ್ತುರಾಜ್‌

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 7:42 IST
Last Updated 29 ಜೂನ್ 2016, 7:42 IST

ಪರಶುರಾಂಪುರ: ಸಮಸ್ಯೆಗಳನ್ನು ಅರಿತು ಅಧಿಕಾರಿಗಳು ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಟಿ.ಮುತ್ತುರಾಜ್‌ ಅಭಿಪ್ರಾಯಪಟ್ಟರು.

ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ಶಿವಮೊಗ್ಗ ತೋಟಗಾರಿಕಾ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೋಬಳಿ ವ್ಯಾಪ್ತಿಯಲ್ಲಿ ಆರೇಳು ವರ್ಷಗಳಿಂದ ಸರಿಯಾಗಿ ಮಳೆ ಬೀಳದೆ ರೈತರು ಸತತ ಬರಗಾಲ ಎದುರಿಸು ತ್ತಿದ್ದಾರೆ. ಕಳೆದ ವರ್ಷ ಪಾವತಿಸಿರುವ ಬೆಳೆ ವಿಮೆಯನ್ನು ಕೂಡಲೇ ಎಲ್ಲಾ ರೈತರಿಗೆ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

ಜಿಲ್ಲಾ ಸಹಾಯಕ ಕೃಷಿ ನಿರ್ದೇಶಕಿ ಡಾ. ಭಾರತಮ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ‘ರೈತರಿಗೆ ಒಂದೇ ಸೂರಿನಡಿ ಕೃಷಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸರ್ಕಾರ ಈ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟತಜ್ಞ ಡಾ. ಓಂಕಾರಪ್ಪ ಮಾತನಾಡಿ, ‘ಬೆಳೆಗಳ ಸರ್ವರೋಗಕ್ಕೂ ಸಗಣಿಯೇ ಮದ್ದು. ಇದನ್ನು ಭೂಮಿಗೆ ಬಳಸದೆ ಹೋದರೆ ಮುಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮನುಕುಲಕ್ಕೆ ಆಪತ್ತು ಕಟ್ಟಿಟ್ಟಬುತ್ತಿ. ರಸಗೊಬ್ಬರಗಳ ಅತಿಯಾದ ಬಳಕೆಯಿಂದ ಭೂಮಿಯಲ್ಲಿನ ಸೂಕ್ಷ್ಮಾಣು ಜೀವಿಗಳು ಮತ್ತು ಲಘು ಪೋಷಕಾಂಶಗಳು ಕಡಿಮೆಯಾಗಿವೆ; ಭೂಮಿ ಬರಡಾಗಿದೆ. ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆಯನ್ನು ಮಾಡಿಸಿ ಅದಕ್ಕೆ ಸೂಕ್ತವಾದ ಬೆಳೆಯನ್ನು ಬೆಳೆಯಬೇಕು ಎಂದು ಸಲಹೆ ನೀಡಿದರು.

ಕೃಷಿ ವಸ್ತು ಪ್ರದರ್ಶನದಲ್ಲಿ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರವಾಗಿ ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಉಮಾ, ವಿಜಯಲಕ್ಷ್ಮಿ, ಕರಡಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಲಕ್ಷ್ಮಿದೇವಿ, ಸದಸ್ಯರಾದ ಸಿದ್ದೇಶ್‌, ಬೊಮ್ಮಕ್ಕ, ಅಧಿಕಾರಿಗಳಾದ ಡಾ. ರಂಗಸ್ವಾಮಿ, ಮಂಜಣ್ಣ, ಮುಕ್ತಾ, ತಿಪ್ಪೇಸ್ವಾಮಿ, ಪ್ರಭಾಕರ್, ಪ್ರತಾಪ್‌ ರೆಡ್ಡಿ, ಹೋಬಳಿ ವ್ಯಾಪ್ತಿಯ ರೈತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.