ADVERTISEMENT

ಟಿಪ್ಪು ಜಯಂತಿ: ಜಿಲ್ಲೆಯಾದ್ಯಂತ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 9:15 IST
Last Updated 10 ನವೆಂಬರ್ 2017, 9:15 IST

ಮಂಗಳೂರು: ಟಿಪ್ಪು ಸುಲ್ತಾನ್‌ ಜಯಂತಿಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಬಂದೋಬಸ್ತ್‌ಗೆ ಕೆಎಸ್‌ಆರ್‌ಪಿ, ಸಿಆರ್‌ಪಿ, ಕ್ಷಿಪ್ರ ಕಾರ್ಯ ಪಡೆ ತುಕಡಿ ಸೇರಿದಂತೆ ಒಟ್ಟು 2 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌, ಟಿಪ್ಟು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತ್ರ ಆಚರಿಸಲಾಗುತ್ತಿದೆ. ತಾಲ್ಲೂಕು ಕೇಂದ್ರಗಳು ಹಾಗೂ ಇತರೆಡೆ ಯಾವುದೇ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅನುಮತಿ ನೀಡಿಲ್ಲ. ಜತೆಗೆ ಪ್ರತಿಭಟನೆಗೂ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ತಹಶೀಲ್ದಾರರು ಹಾಗೂ ತಾಲ್ಲೂಕು ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದರು.
ನಗರ ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಮಾತನಾಡಿ, ನಗರದಾದ್ಯಂತ ಸೂಕ್ತ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಗುರುವಾರ ನಗರದ ನೆಹರೂ ಮೈದಾನದಿಂದ ವಿವಿಧೆಡೆ ಕ್ಷಿಪ್ರ ಕಾರ್ಯಪಡೆ, ಕೆಎಸ್‌ಆರ್‌ಪಿ ಹಾಗೂ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ ಎಂದರು.

ADVERTISEMENT

4 ಕೆಎಸ್‌ಆರ್‌ಪಿ, 10 ಸಿಆರ್‌ಪಿ, 1 ಕ್ಷಿಪ್ರ ಕಾರ್ಯಪಡೆಯ ತುಕಡಿಗಳು ನಗರದಲ್ಲಿ ಠಿಕಾಣಿ ಹೂಡಿದ್ದು, ಅಧಿಕಾರಿಗಳು, ಸಿಬ್ಬಂದಿ ಸೇರಿ ಒಟ್ಟು 1,200 ಜನರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಅಪರಾಧ ಹಿನ್ನೆಲೆ ಇರುವ 80 ಜನರ ಮೇಲೆ ಪ್ರಕರಣ ದಾಖಲಿಸಿ, ಬಾಂಡ್‌ ಪಡೆಯಲಾಗಿದೆ. ಈ ಹಿಂದೆ ಕೋಮುಗಲಭೆ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವವರನ್ನು ಠಾಣೆಗೆ ಕರೆಯಿಸಿ, ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ಕುಮಾರ್‌ ರೆಡ್ಡಿ ಮಾತನಾಡಿ, 10 ಕೆಎಸ್‌ಆರ್‌ಪಿ ಮತ್ತು ಒಂದು ಕ್ಷಿಪ್ರ ಕಾರ್ಯಪಡೆ ತುಕಡಿ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1,300 ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. ಪೋಸ್ಟರ್‌, ಬಂಟಿಂಗ್ಸ್‌ಗೆ ಅನುಮತಿ ಕಡ್ಡಾಯವಾಗಿದ್ದು, ಅನುಮತಿ ಪಡೆಯದೇ ಪೋಸ್ಟರ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಇಂತಹ ಸಂದರ್ಭಗಳಲ್ಲಿ ಸಮಸ್ಯೆ ಮಾಡುವವರ ಪಟ್ಟಿ ತಯಾರಿಸಲಾಗಿದ್ದು, ಅವರನ್ನು ಹದ್ದುಬಸ್ತಿನಲ್ಲಿ ಇಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.