ADVERTISEMENT

ತಾ.ಪಂ. ಚುನಾವಣೆ ಇಂದು

​ಪ್ರಜಾವಾಣಿ ವಾರ್ತೆ
Published 6 ಮೇ 2016, 5:11 IST
Last Updated 6 ಮೇ 2016, 5:11 IST

ಉಡುಪಿ: ಉಡುಪಿ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಬೆಳಿಗ್ಗೆ 11ರಿಂದ 1ಗಂಟೆಯ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 1 ಗಂಟೆಯಿಂದ 2ರವರೆಗೆ ನಾಮಪತ್ರ ವಾಪಸ್‌ ಪಡೆಯಲು ಅವಕಾಶ ಇರುತ್ತದೆ. ಒಂದು ಹುದ್ದೆಗೆ ಒಂದೇ ನಾಮಪತ್ರ ಸಲ್ಲಿಕೆಯಾದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಹೆಚ್ಚಿನ ಮಂದಿ ಸ್ಪರ್ಧಿಗಳು ಇದ್ದರೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ನಡೆಯಲಿದೆ.

ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಒಟ್ಟು 41 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ 27 ಸ್ಥಾನ ಪಡೆದು ಬಹುಮತ ಹೊಂದಿದೆ. ಕಾಂಗ್ರೆಸ್‌ 14 ಸದಸ್ಯರನ್ನು ಹೊಂದಿದೆ.

‘ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಹುದ್ದೆ ಮೀಸಲಿರುವುದರಿಂದ ಎಲ್ಲ ಮಹಿಳೆಯರೂ ಅಧ್ಯಕ್ಷ ಹುದ್ದೆಗೆ ಅರ್ಹರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೂ ಎಲ್ಲ 27 ಸದಸ್ಯರು ಅರ್ಹತೆ ಹೊಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಎಲ್ಲ ಸದಸ್ಯರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಎಲ್ಲ ಸದಸ್ಯರ ಅಭಿಪ್ರಾಯ ಪಡೆದು ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜನ ಹೆಗ್ಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.