ADVERTISEMENT

ಪೂರ್ತಿ ಬೆಳೆ ಸಾಲಮನ್ನಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2017, 9:08 IST
Last Updated 23 ಆಗಸ್ಟ್ 2017, 9:08 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಮಂಗಳೂರು: ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದೇ ಕೃಷಿಕ ಸಮುದಾಯವೇ ಕಂಗಾಲಾಗಿದೆ. ಆದ್ದರಿಂದ ಸರ್ಕಾರವು ಬೆಳೆಸಾಲವನ್ನು ಪೂರ್ತಿಯಾಗಿ ಮನ್ನಾ ಮಾಡ ಬೇಕು ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ರವಿಕಿರಣ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನಡೆದ ರೈತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಗಾಗಲೇ ಸಾಲ ಮರುಪಾವತಿ ಮಾಡಿದವರಿಗೂ ಬೆಳೆಸಾಲ ಮನ್ನಾದ ಲಾಭ ದೊರೆ ಯುವಂತಾಗಬೇಕು. ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಿಂದ ಕೃಷಿಕರು ಪಡೆದ ಸಾಲವನ್ನೂ ಮನ್ನಾ ಮಾಡಬೇಕು. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು ’ ಎಂದು ಆಗ್ರಹಿಸಿದರು.

ರೈತರು ಮತ್ತು ಕಾರ್ಮಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಅವರು ಹೇಳಿದರು.

ADVERTISEMENT

ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್‌ ಭಟ್‌ ಕೊಜಂಬೆ ಮಾತನಾಡಿ, ‘ ಪಶ್ಚಿಮ ಘಟ್ಟದ ಸಂರಕ್ಷಣೆಯ ಉದ್ದೇಶದಿಂದ ನೀಡಲಾದ ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಅನುಷ್ಠಾನಕ್ಕೆ ತರಬಾರದು’ ಎಂದು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯಾದವಶೆಟ್ಟಿ ಮಾತನಾಡಿ, ಸಾಲದ ಸುಳಿಯಲ್ಲಿ ಸಿಲುಕಿದ ರೈತರಿಗೆ ಬರಪರಿಸ್ಥಿತಿ ಸಿಡಿಲಿನಂತೆ ಎರಗಿದೆ. ಕೇಂದ್ರ ಸರ್ಕಾರ ಅವರಿಗೆ ನೆರವು ಒದಗಿಸುವುದು ಅವಶ್ಯಕವಾಗಿದೆ’ ಎಂದರು.

ಸ್ಪರ್ಧೆ ಇಂದು
ಮಂಗಳೂರು: ಮಂಗಳೂರು ವಿಶ್ವವಿ ದ್ಯಾಲಯ ಹಾಗೂ ವಿಶ್ವವಿದ್ಯಾಲಯ ಕಾಲೇಜು ವತಿಯಿಂದ ಅಂತರ ಕಾಲೇಜು ಯುವ ಸಂಸತ್‌ ಸ್ಪರ್ಧೆಯನ್ನು ಬುಧವಾರ (ಇದೇ 23) ಬೆಳಿಗ್ಗೆ 10.30 ಕ್ಕೆ ನಗರದ ವಿಶ್ವವಿದ್ಯಾಲಯ ಕಾಲೇಜಿನ ಡಾ. ಶಿವರಾಮ ಕಾರಂತ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.