ADVERTISEMENT

‘ಅಶ್ಲೀಲತೆಗೆ ಕಡಿವಾಣ ಹಾಕಿ; ಮಹಿಳೆಗೆ ರಕ್ಷಣೆ ನೀಡಿ’

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2017, 8:47 IST
Last Updated 23 ಆಗಸ್ಟ್ 2017, 8:47 IST

ದಾವಣಗೆರೆ: ದೇಶದಲ್ಲಿ ಮಹಿಳಾ ಶೋಷಣೆ ನಿಲ್ಲಬೇಕು. ಸಿನಿಮಾಗಳಲ್ಲಿ ಅಶ್ಲೀಲತೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಮಂಗಳವಾರ ಎಐಎಂಎಸ್‌ಎಸ್‌ ಕಾರ್ಯಕರ್ತರು ನಗರದ ಪುಷ್ಪಾಂಜಲಿ ಚಿತ್ರಮಂದಿರ ಬಳಿ ಅಶ್ಲೀಲ ಪೋಸ್ಟರ್‌ಗಳನ್ನು ಕಿತ್ತೆಸೆದು ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಮಹಿಳೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಹೆಣ್ಣು ಭ್ರೂಣ ಹತ್ಯೆಯಿಂದಾಗಿ ಹೆಣ್ಣುಮಕ್ಕಳ ಸಂಖ್ಯೆ ದಿನೇದಿನೇ ಕುಸಿಯುತ್ತಿದೆ. ಶಾಲಾ ಕಾಲೇಜು, ಕಚೇರಿ, ಸಾರ್ವಜನಿಕ ಸ್ಥಳಗಳಲ್ಲೂ ಶೋಷಣೆ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಮೂಹ ಮಾಧ್ಯಮಗಳಲ್ಲಿ ಅಶ್ಲೀಲತೆ ಹೆಚ್ಚಾಗಿದೆ. ಕೀಳು ಅಭಿರುಚಿಯ ಸಿನಿಮಾಗಳು, ಸಾಹಿತ್ಯದಿಂದಾಗಿ ಲೈಂಗಿಕ ಅಪರಾಧಗಳು ಹೆಚ್ಚಾಗಿವೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು. ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳಲ್ಲಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳನ್ನು ರಚಿಸಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಅಶ್ಲೀಲತೆ ಹಾಗೂ ಸೈಬರ್ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಎಂಎಸ್‌ಎಸ್‌ ಜಿಲ್ಲಾ ಸಂಚಾಲಕಿ ಜ್ಯೋತಿ ಕುಕ್ಕವಾಡ, ಜಿಲ್ಲಾ ಸಂಘಟನಾಕಾರರಾದ ಭಾರತಿ, ಬನಶ್ರೀ, ಸವಿತಾ, ಆರತಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.