ADVERTISEMENT

ಕಾಂಗ್ರೆಸ್‌ ಸಂಘಟನೆಗೆ ಒತ್ತು: ಶಾಸಕ ರಾಜೇಶ್‌

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2014, 6:01 IST
Last Updated 22 ಸೆಪ್ಟೆಂಬರ್ 2014, 6:01 IST

ಜಗಳೂರು: ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎಂದು ಶಾಸಕ ಎಚ್‌.ಪಿ. ರಾಜೇಶ್‌ ಹೇಳಿದರು. ಪಟ್ಟಣದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯ್ತಿ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಮಿತಿಯನ್ನು ರಚಿಸಲಾಗುವುದು. ತೆರವಾಗಿರುವ ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮುಂದಿನವಾರ ಚುನಾವಣೆ ನಡೆಯಲಿದ್ದು, ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಕಳೆದ  ಬಾರಿ ಹತ್ತಿ ಬೆಳೆದು ರೈತರು ಸಾಕಷ್ಟು ನಷ್ಟ ಅನುಭವಿಸಿದ್ದರು. ಈ ವರ್ಷ ಯಾವುದೇ ಸಮಸ್ಯೆ ಇಲ್ಲ. ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, 18 ಹುದ್ದೆಗಳಿಗೆ ಕೇವಲ ನಾಲ್ಕು ವೈದ್ಯರಿದ್ದಾರೆ.

ಹಲವು ವೈದ್ಯರು ರಾಜೀನಾಮೆ ನೀಡಿದ್ದಾರೆ. ಚಳ್ಳಕೆರೆ, ಕೂಡ್ಲಿಗಿ ತಾಲ್ಲೂಕು ಸೇರಿದಂತೆ ಹೊರಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಸ್ಪತ್ರೆಗೆ ಧಾವಿಸುತ್ತಿದ್ದು, ಸಮಸ್ಯೆಯಾಗಿದೆ. ಈ ಹಿನ್ನಲೆಯಲ್ಲಿ ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ವಾರಕ್ಕೊಮ್ಮೆ  ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗುವುದು. ಖಾಸಗಿ ಆಸ್ಪತ್ರೆಯ ಸಹಯೋಗದೊಂದಿಗೆ ಹಲವು ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಶಾಸಕರು ಸ್ಪಷ್ಟಪಡಿಸಿದರು.

ತಾಲ್ಲೂಕಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದು,ಆಡಳಿತಕ್ಕೆ ಚುರುಕು ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಹಾಗೂ ರಾಜೀವ್‌ಗಾಂಧಿ ಸಬ್‌ಮಿಷನ್‌ ಯೋಜನೆಯ ಕಾಮಗಾರಿ ಪ್ರಕ್ರಿಯೆ ಟೆಂಡರ್‌ ಹಂತದಲ್ಲಿದೆ.  ತುಂಗಭದ್ರಾ ನದಿಯಿಂದ ತಾಲ್ಲೂಕಿನ 3 ಕೆರೆಗಳಿಗೆ ನೀರುಣಿಸುವ ಯೋಜನೆಯನ್ನು ಮರುಪರಿಷ್ಕರಣೆ ಮಾಡಲಾಗುವುದು ಎಂದು ಶಾಸಕ ರಾಜೇಶ್‌ ಹೇಳಿದರು.

ಕೆಪಿಸಿಸಿ ಸದಸ್ಯ ಡಿ. ಬಸವರಾಜ್‌ ಮಾತನಾಡಿ, ರಾಜ್ಯದಲ್ಲಿ ಅತಿವೃಷ್ಟಿ ಸಮಸ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ  ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂದಿಸಿದೆ. ಆದರೂ ಸಹ  ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ರಾಜಕೀಯ ಪ್ರೇರಿತ ಹಾಗೂ ಪ್ರಚಾರದ ಉದ್ದೇಶದ ಹೋರಾಟ ಇದಾಗಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ವೇಳೆ ರಾಜ್ಯ ಬಿಜೆಪಿ ಮುಖಂಡರು ಪ್ರಧಾನಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಒತ್ತಡ ಹಾಕಲಿ.  ಅಲ್ಪಸಂಖ್ಯಾತರ ಬಗ್ಗೆ  ಮೋದಿ ವ್ಯಕ್ತಪಡಿಸಿರುವ ಅಭಿಪ್ರಾಯ ನೈಜವಾದುದಲ್ಲ. ಈಚೆಗೆ ದೇಶಾದ್ಯಂತ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ತಿರಸ್ಕರಿಸಿರುವುದು ಸ್ಪಷ್ಟವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಅಧ್ಯಕ್ಷ ಕಡತಿ ತಿಪ್ಪೇಶ್, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ, ಮುಖಂಡರಾದ ಹಾಲಸ್ವಾಮಿ, ಪಲ್ಲಾಗಟ್ಟೆ ಶೇಖರಪ್ಪ, ಗಿರೀಶ್‌ ಒಡೆಯರ್‌,ಜೆ.ಎನ್‌. ಶಿವನಗೌಡ, ಇಕ್ಬಾಲ್‌, ಚಂದ್ರಪ್ಪ, ಎ. ವೆಂಕಟೇಶ್‌, ಕೇಶವ, ದೇವೇಂದ್ರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.