ADVERTISEMENT

ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮ ನಿಷಿದ್ಧ

ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2017, 11:43 IST
Last Updated 12 ಜನವರಿ 2017, 11:43 IST
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್ ಅಧ್ಯಕ್ಷತೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಸಭೆ ನಡೆಯಿತು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್ ಅಧ್ಯಕ್ಷತೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಸಭೆ ನಡೆಯಿತು.   
ದಾವಣಗೆರೆ: ಸಾರ್ವತ್ರಿಕ ಚುನಾವಣೆಗೆ ಅನ್ವಯವಾಗುವ ಮಾದರಿ ನೀತಿ ಸಂಹಿತೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೂ ಜಾರಿಯಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸು ವಂತಿಲ್ಲ ಎಂದು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್ ಆದೇಶಿಸಿದರು.
 
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಬುಧವಾರ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
 
ಮಾದರಿ ನೀತಿ ಸಂಹಿತೆ ಜನವರಿ 4ರಿಂದ ಫೆಬ್ರುವರಿ 9ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಯಾವುದೇ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವಂತಿಲ್ಲ. ಕುಡಿಯುವ ನೀರು ಪೂರೈಕೆ, ರಸ್ತೆ ಕಾಮಗಾರಿಗೂ ಚಾಲನೆ ನೀಡುವಂತಿಲ್ಲ. ಅಲ್ಲದೇ, ಜಿಲ್ಲಾ ಪಂಚಾಯ್ತಿ ಕೆಡಿಪಿ, ಸಾಮಾನ್ಯ ಸಭೆ, ಸ್ಥಳೀಯ ಸಂಸ್ಥೆಗಳ ಸಭೆಗಳನ್ನು ನಡೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
 
ಈ ಉಪಚುನಾವಣೆ ವ್ಯಾಪ್ತಿಗೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕುಗಳು ಒಳಪಡುತ್ತಿದ್ದು, ಇಲ್ಲಿ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆದರೆ ಅದರ ಸಂಪೂರ್ಣ ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಸೂಚನೆ ನೀಡಿದರು.
 
ಯಾವುದೇ ಸಚಿವರು ಸಭೆ ನಡೆಸಿದರೆ ಅದರಲ್ಲಿ ಅಧಿಕಾರಿಗಳು ಭಾಗವಹಿಸುವಂತಿಲ್ಲ. ಸಚಿವರೂ ತಮ್ಮ ಅಧಿಕೃತ ಪ್ರವಾಸದಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆ, ಚರ್ಚೆ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
 
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಅಧಿಕಾರಿಗಳನ್ನು ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದರು.
 
ಸ್ಥಳೀಯ ಕೇಬಲ್‌ ಟಿ.ವಿ. ಚಾನೆಲ್‌ಗಳಲ್ಲಿ ಪ್ರಸಾರವಾಗುವ ಚುನಾವಣಾ ಸಂಬಂಧಿ ವರದಿ ಹಾಗೂ ಜಾಹೀರಾತುಗಳ ಬಗ್ಗೆ ಗಮನ ಹರಿಸಲು ಮೀಡಿಯಾ ಸರ್ಟಿಫಿಕೇಷನ್ ಅಂಡ್ ಮಾನಿಟರಿಂಗ್ ಕಮಿಟಿ (ಎಂಸಿಎಂಸಿ) ರಚಿಸಿದ್ದು, ಇದಕ್ಕೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧ್ಯಕ್ಷರಾಗಿರುತ್ತಾರೆ (ಮೊ: 72597 00555), ಸಹಾಯಕ ವಾರ್ತಾಧಿಕಾರಿ ಭಾಗ್ಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ (ಮೊ: 70266 70384). ಈ ಸಮಿತಿ ಸದಸ್ಯರಾಗಿ ಉಪವಿಭಾಗಾಧಿಕಾರಿಗಳಾದ ಬಿ.ಟಿ.ಕುಮಾರಸ್ವಾಮಿ (ಮೊ: 94492 86250), ಟಿ.ವಿ.ಪ್ರಕಾಶ್ (ಮೊ: 77600 57149), ಡಿಯುಡಿಸಿ ಯೋಜನಾ ನಿರ್ದೇಶಕ ಜಿ.ಟಿ.ವೀರೇಶ್ ಕುಮಾರ್ (ಮೊ: 99164 55906). ಇದ್ದಾರೆ. ದೂರುಗಳಿದ್ದರೆ ಸಾರ್ವಜನಿಕರು ಅವರನ್ನು ಸಂಪರ್ಕಿಸ ಬಹುದು ಎಂದರು.
 
ಗ್ರಾಪಂ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿಕಾರಿ ಗಳನ್ನಾಗಿ ಈಗಾಗಲೇ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
 
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯ್ತಿ ಸಿಇಒ ಎಸ್‌.ಅಶ್ವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.