ADVERTISEMENT

‘ಪಕ್ಷ ಸಂಘಟನೆಗೆ ಒತ್ತು ನೀಡಿ’

ಹುಬ್ಬಳ್ಳಿಯಲ್ಲಿ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2017, 6:26 IST
Last Updated 6 ಫೆಬ್ರುವರಿ 2017, 6:26 IST

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇದ್ದು, ಈಗಿನಿಂದಲೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಆದ್ಯತೆ ನೀಡುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಹೇಳಿದರು.

ಇಲ್ಲಿನ ಚವ್ಹಾಣ ಗಾರ್ಡನ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್‌ ಶಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 135ಕ್ಕೂ ಅಧಿಕ ಸ್ಥಾನವನ್ನು ಸುಲಭವಾಗಿ ಗೆಲ್ಲುವ ಅವಕಾಶ ಇದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ವೈಫಲ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವ ಮೂಲಕ ಸಂಘಟನೆಗೆ ಆದ್ಯತೆ ನೀಡಬೇಕು ಎಂದರು.

ದೇಶದೆಲ್ಲೆಡೆ ಮೋದಿ ಅವರ ಹವಾ ಇರುವುದರಿಂದ ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ನವಲಗುಂದ, ಕುಂದಗೋಳ, ಕಲಘಟಗಿ ಮತ್ತು ಹುಬ್ಬಳ್ಳಿ ಎಪಿಎಂಸಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದರಿಂದ ಅಧಿಕಾರ ನಮ್ಮ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರ ಸಾಲ ಮನ್ನಾ ಮಾಡಿ: ಬರ ನಿರ್ವಹಣೆ ಸಂಬಂಧ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಹಣ ನೀಡಿದರೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವುದನ್ನು ಬಿಟ್ಟು ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ಸರಿಯಲ್ಲ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಕೇಂದ್ರ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಬಡವರ, ಶೋಷಿತರ ಬಜೆಟ್ ಇದಾಗಿದೆ ಎಂದು ಶ್ಲಾಘಿಸಿದರು.
ಮಾಜಿ ಶಾಸಕರಾದ ಸೀಮಾ ಮಸೂತಿ, ಎಸ್‌.ಐ.ಚಿಕ್ಕನಗೌಡ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾ.ನಾಗರಾಜ, ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಜಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ, ಮುಖಂಡರಾದ ಮೋಹನ ಲಿಂಬಿಕಾಯಿ, ಮಹೇಶ್‌ ಟೆಂಗಿನಕಾಯಿ, ಎಂ.ಆರ್‌.ಪಾಟೀಲ, ಬಿ.ಕುಂದಗೋಳಮಠ, ಜಯತೀರ್ಥ ಕಟ್ಟಿ, ಶಶಿ ಮೌಳಿ ಇದ್ದರು.

*
ನೋಟು ರದ್ದಾದ ಬಳಿಕ ಕಾಂಗ್ರೆಸ್‌ ಮುಖಂಡರಿಗೆ ಹೆಚ್ಚು ತೊಂದರೆಯಾಗಿದೆ. ಆದರೆ, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ.
-ಪ್ರದೀಪ ಶೆಟ್ಟರ್‌,
ವಿಧಾನ ಪರಿಷತ್‌ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT