ADVERTISEMENT

ಯೋಜನೆಗಳ ಅನುಷ್ಠಾನದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ದೊಡ್ಡದು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 8:58 IST
Last Updated 22 ಡಿಸೆಂಬರ್ 2017, 8:58 IST

ಧಾರವಾಡ: ‘ಸ್ವಾತಂತ್ರ್ಯಾನಂತರ ಹಲವು ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ  ಅಪೇಕ್ಷಿತ ಅಭಿವೃದ್ಧಿ ಸಾಧ್ಯವಾಗಿಲ್ಲ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡುವ ಅಗತ್ಯವಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಇಲ್ಲಿಗೆ ಸಮೀಪದ ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ತರಬೇತಿ ಕೇಂದ್ರದ ಕಟ್ಟಡ  ಸಂಕೀರ್ಣವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ರೂಪುಗೊಂಡ ಪಂಚವಾರ್ಷಿಕ ಯೋಜನೆಗಳ ಮೂಲಕ ಅದ್ಭುತ ಅಭಿವೃದ್ಧಿ, ಬದಲಾವಣೆ ಸಾಧ್ಯವಾಗಿದೆ. ಆದರೆ, ಅದು ಸಾಲದು. ಹಲವಾರು ಕಾರಣಗಳಿಂದ ಗ್ರಾಮೀಣಾಭಿವೃದ್ಧಿ ಅಪೇಕ್ಷಿತ ಮಟ್ಟದಲ್ಲಿ ಆಗಿಲ್ಲ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಡಾ.ಎಸ್. ಬಿ. ಬೊಮ್ಮನಹಳ್ಳಿ ಮಾತನಾಡಿ, ‘ಆರ್ಥಿಕವಾಗಿ ಹಿಂದುಳಿದ ಜನರನ್ನು ಸ್ವಾವಲಂಬಿಗಳಾಗಿ ಮಾಡುತ್ತಿರುವ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರ ಕೆಲಸ ಅಭಿನಂದನೀಯ‘ ಎಂದರು.

ಜೆಎಸ್‌ಎಸ್ ಸಂಸ್ಥೆ ಕಾರ್ಯದರ್ಶಿ ಪ್ರೊ. ನ.ವಜ್ರಕುಮಾರ, ಎ.ಐ.ನಡಕಟ್ಟಿ, ಜೀವಂಧರಕುಮಾರ, ಡಿ.ಸುರೇಂದ್ರಕುಮಾರ, ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ಕೆವಿಜಿ ಬ್ಯಾಂಕ್ ಅಧ್ಯಕ್ಷ ಆರ್.ರವೀಂದ್ರನ್, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಐಡಿಬಿಐ ಬ್ಯಾಂಕ್ ಡಿಜಿಎಂ ಪಿಚ್ಚಯ್ಯ, ಎಸ್‌ಬಿಐ ಬ್ಯಾಂಕ್ ಡಿಜಿಎಂ ಇಂದ್ರನೀಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ, ಪ್ರಾದೇಶಿಕ ನಿರ್ದೇಶಕ ಆನಂದ, ಯೋಜನಾಧಿಕಾರಿ ಕುಸುಮಾಧರ ಇದ್ದರು. ಇದೇ ಸಂದರ್ಭದಲ್ಲಿ ಐಡಿಬಿಐ ಆರ್ಥಿಕ ನೆರವಿನೊಂದಿಗೆ ಸ್ವ ಉದ್ಯೋಗಿಗಳಿಗೆ ಆಟೊ ರಿಕ್ಷಾ, ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.