ADVERTISEMENT

ವಿವಿಧ ಬೇಡಿಕೆ: ಫೆ. 6ರಿಂದ ಶಿಕ್ಷಕರ ಹೋರಾಟ

​ಪ್ರಜಾವಾಣಿ ವಾರ್ತೆ
Published 16 ಜನವರಿ 2017, 6:49 IST
Last Updated 16 ಜನವರಿ 2017, 6:49 IST

ಹುಬ್ಬಳ್ಳಿ: ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕನಿಷ್ಠ ವೇತನ ಜಾರಿ ಮತ್ತು ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಫೆಬ್ರುವರಿ 6ರಿಂದ ಹೋರಾಟ ನಡೆಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟ ಭಾನುವಾರ ಇಲ್ಲಿ ನಿರ್ಧರಿಸಿತು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಸಭೆ ನಡೆಸಿ ಹೋರಾಟದ ರೂಪುರೇಷೆ ನಿರ್ಧರಿಸಿದರು.

‘ಶಿಕ್ಷಕರಿಗೆ ಕನಿಷ್ಠ ವೇತನ ಜಾರಿ ಮತ್ತು ಅನುದಾನರಹಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಸ್ಥಗಿತಗೊಳಿಸಿರುವುದನ್ನು ಮುಂದುವರಿಸುವಂತೆ ಒತ್ತಾಯಿಸಿ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೋರಾಟ ಮಾಡಲು ನಿರ್ಧರಿಸಲಾಗಿದೆ’ ಎಂದು ಹೊರಟ್ಟಿ ತಿಳಿಸಿದರು.

‘ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ–ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಫೆಬ್ರುವರಿ 6ರಂದು  ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು. 17ರಂದು ಲೇಖನಿ ಸ್ಥಗಿತ ಹೋರಾಟ ಹಾಗೂ 18ರಂದು ಸಾಮೂಹಿಕ ರಜೆ ಹಾಕಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸುವ ಕುರಿತು ಜ. 29ರಂದು ನಡೆಸುವ ಸಭೆಯಲ್ಲಿ ನಿರ್ಧರಿಸಲಾಗುವುದು’ ಎಂದು ಅವರು ತಿಳಿಸಿದರು. 

ಕರ್ನಾಟಕ ಮಾಧ್ಯಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್‌. ಭಟ್‌, ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಬಿ. ನಾತು, ಪದಾಧಿಕಾರಿಗಳಾದ ಪ್ರಭಾಕರ ಬಂಟ, ನಂದೆಣ್ಣನವರ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.