ADVERTISEMENT

‘ಶೌಚಾಲಯ ನಿರ್ಮಾಣ ವಿಚಾರ: ನೆಪ ಸಲ್ಲ

​ಪ್ರಜಾವಾಣಿ ವಾರ್ತೆ
Published 13 ಮೇ 2017, 9:22 IST
Last Updated 13 ಮೇ 2017, 9:22 IST

ರೋಣ: ‘ಪ್ರತಿ ಗ್ರಾಮದ ಎಲ್ಲ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆದರೆ, ನೀವು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳಿ ಜಾರಿಕೊಳ್ಳುತ್ತಿದ್ದಿರಿ, ನಿಮಗೆ ವಹಿಸಿದ ಕೆಲಸವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ಗ್ರಾಮ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ತರಾಟೆಗೆ ತೆಗೆದುಕೊಂಡರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಅವರು ಮಾತನಾಡಿದರು.ಗ್ರಾಮ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುಟುಂಬಗಳಲ್ಲಿ ಎಷ್ಟು ಕುಟುಂಬಗಳು ಶೌಚಾಲಯಗಳನ್ನು ಹೊಂದಿವೆ, ಎಷ್ಟು ಕುಟುಂಬಗಳು ಶೌಚಾಲಯಗಳನ್ನು ಹೊಂದಿಲ್ಲ ಎಂಬ ಮಾಹಿತಿಯನ್ನು ಪಡೆದು ಅದಕ್ಕೆ ಸೂಕ್ತ ಪರಿಹಾರವನ್ನು ನೀಡುವಲ್ಲಿ ಹಿಂದೇಟು ಹಾಕುತ್ತಿರುವುದೇಕೆ? ಶೌಚಾಲಯ ನಿರ್ಮಾಣಕ್ಕೆ ಇರುವ ತೊಂದರೆ ಏನು? ಎಂದರು.

ಪಿಡಿಓಗಳಿಂದ ಗ್ರಾಮ ಪಂಚಾಯಿತಿವಾರು ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸಕ್ಕೆ ಬಂದಂತಹ ಕೂಲಿ ಕಾರ್ಮಿಕರಿಗೆ ಶೌಚಾಲಯದ ಬಗ್ಗೆ ಅರಿವು ಮೂಡಿಸಿ, ಶೌಚಾಲಯ ನಿರ್ಮಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ ಎಂದರು.

ADVERTISEMENT

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ದಿನಗಳನ್ನು ಸೃಷ್ಟಿಸುವಲ್ಲಿ ಹಿಂದೆ ಬಿದ್ದಿರುವುದಕ್ಕೆ ಅಸಮಾದಾನ ವ್ಯಕ್ತಪಡಿಸಿದರು.ಸಭೆಗೆ ಹಾಜರಾಗದ ಪಿಡಿಓಗಳಿಗೆ ನೋಟಿಸ್ ನೀಡುವಂತೆ ಸೂಚಿದರು.

ತಾಲ್ಲೂಕಿನಲ್ಲಿ  ಒಟ್ಟು 41,252 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಇದರಲ್ಲಿ ಈಗಾಗಲೇ 18,863 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ 22,903 ಶೌಚಾಲಯಗಳನ್ನು ನಿರ್ಮಾಣ ಮಾಡಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವಿ.ಚಳಗೇರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.