ADVERTISEMENT

‘ಹಣ ಬಲದಿಂದ ಕಾಂಗ್ರೆಸ್ ಗೆಲುವು’

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 6:42 IST
Last Updated 15 ಏಪ್ರಿಲ್ 2017, 6:42 IST

ಗದಗ: ವಿಧಾನಸಭೆ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣಬಲದಿಂದ ಜಯ ಗಳಿಸಿದೆ ಎಂದು ಸಂಸದ ಬಿ.ಶ್ರೀರಾಮುಲು ಹೇಳಿದರು.ನಗರದ ವರಸಿದ್ಧಿ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷ ಮಾತ್ರ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸಲಿದೆ. 2018ರಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದರು.

ಹಿಂದೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ₹ 98 ಕೋಟಿ ಮೊತ್ತದ 2ನೇ ಹಂತದ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ನಗರದ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವುದಕ್ಕೆ ಸಚಿವ ಎಚ್.ಕೆ. ಪಾಟೀಲ ಅವರೇ ಹೊಣೆಯಾಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರಕ್ಕೆ ಅಭಿವೃದ್ಧಿಪರ ಚಿಂತನೆ ಇಲ್ಲ. ರೈತರು, ಬಡ ಕೂಲಿ ಕಾರ್ಮಿಕರು ಸತತ ಬರಗಾಲದಿಂದ ತತ್ತರಿಸಿದ್ದಾರೆ. ಅವರ ಸಂಕಷ್ಟ ನಿವಾರಣೆಗೆ ಯಾವುದೇ ಯೋಜನೆ ರೂಪಿಸಿಲ್ಲ. ಬಡವರು ಉದ್ಯೋಗ ಅರಸಿ ಪಟ್ಟಣಕ್ಕೆ ವಲಸೆ ಹೋಗುತ್ತಿದ್ದಾರೆ ಎಂದರು.

ADVERTISEMENT

ರೈತರು ಮತ್ತು ಕೃಷಿ ಕಾರ್ಮಿಕರು ವಲಸೆ ಹೋಗುವುದನ್ನು ತಡೆಯುವ ಮತ್ತು ಸ್ಥಳೀಯವಾಗಿ ಲಭ್ಯ ಇರುವ ಯಾವುದೇ ಸಂಪನ್ಮೂಲದ ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ಮತ್ತು ಜಿಲ್ಲಾ ಸಚಿವರು ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದಾರೆ. ಜನರ ಏಳ್ಗೆಗಿಂತ ಸ್ವಹಿತಾಸಕ್ತಿಯೇ ಹೆಚ್ಚಾಗಿದೆ ಎಂದು ಆರೋಪಿಸಿದರು.

ಮಹಾದಾಯಿ ಹೋರಾಟಗಾರ ರೈತರಿಗೆ ಸಮನ್ಸ್ ಜಾರಿ ಮಾಡಿದ್ದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸಂಘಟಿತ ಹೋರಾಟ ನಡೆಸಲಾಗುವುದು. ನ್ಯಾಯ ಮಂಡಳಿ ಹೊರಗೆ ಮಹಾದಾಯಿ ಸಮಸ್ಯೆ ಪರಿಹಾರ ಕಾಣಬೇಕಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.