ಗದಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರದಿಂದ ಆರಂಭಗೊಂಡಿದ್ದು, ಪ್ರಥಮ ಭಾಷೆ ಕನ್ನಡ ಪರೀಕ್ಷೆ ಸುಗಮವಾಗಿ ನಡೆಯಿತು. ಅವಳಿ ನಗರದ ಎಲ್ಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆಗೆ ಹಾಜರಾಗಿದ್ದರು.
ಸೋಮವಾರ ಬೆಳಿಗ್ಗೆ 10.15ಕ್ಕೆ ಪರೀಕ್ಷೆ ಆರಂಭಗೊಂಡಿತು. ಅರ್ಧ ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ವಿದ್ಯಾರ್ಥಿಗಳನ್ನು ಕೆಲವು ಕೇಂದ್ರಗಳಲ್ಲಿ ಹೂಮಳೆ ಸುರಿಸಿ ಬರಮಾಡಿಕೊಳ್ಳಲಾಯಿತು.
ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂಬ ಪರಿಕಲ್ಪನೆ ಅಡಿಯಲ್ಲಿ ಪರೀಕ್ಷಾ ಕೇಂದ್ರಗಳ ಮುಂದೆ ರಂಗೋಲಿ ಹಾಕಿ, ತಳಿರು, ತೋರಣ ಕಟ್ಟಿ ಹಬ್ಬದ ವಾತಾವರಣವನ್ನೇ ನಿರ್ಮಿಸಲಾಗಿತ್ತು. ವಿದ್ಯಾರ್ಥಿಗಳ ಪೋಷಕರು ಮಕ್ಕಳನ್ನು ಪರೀಕ್ಷಾ ಕೇಂದ್ರದತ್ತ ಕರೆತರುವ ದೃಶ್ಯಗಳು, ಪರೀಕ್ಷೆ ಚೆನ್ನಾಗಿ ಬರೆಯುವಂತೆ ಶುಭ ಕೋರುತ್ತಿದ್ದ ದೃಶ್ಯಗಳು ಎಲ್ಲೆಡೆ ಕಂಡುಬಂದವು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲೂ ಮಧ್ಯಾಹ್ನದ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿತ್ತು.
ನಗರದ ಸಿಡಿಒ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಹಾರೈಸಿದರು.
‘ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಎದೆಗುಂದದೇ, ಆತಂಕಕ್ಕೆ ಒಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಉತ್ತಮ ಅಂಕಗಳಿಸುವ ಮೂಲಕ ನಿಮ್ಮ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಲು ಮುಂದಡಿ ಇಡಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ಅವರೊಂದಿಗೆ ಪರೀಕ್ಷಾ ಕೇಂದ್ರದ ವ್ಯವಸ್ಥೆಗಳ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ವೈಶಾಲಿ, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಶಿಸ್ತಿನಿಂದ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದರು.
ಪರೀಕ್ಷೆಗಳು ಸುಲಲಿತವಾಗಿ ನಡೆಯಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್.ಬುರುಡಿ, ನಡುವಿನಮನಿ ಸೇರಿದಂತೆ ಶಾಲೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.
ಪರೀಕ್ಷೆಗೆ ನೋಂದಣಿ ಮಾಡಿದ್ದ 15551 ಜನರ ಪೈಕಿ 15323 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 228 ಜನ ಗೈರಾಗಿದ್ದರು. ಪ್ರಥಮ ಭಾಷೆ ಪರೀಕ್ಷೆಯಲ್ಲಿ ಯಾರೂ ಡಿಬಾರ್ ಆಗಿಲ್ಲಎಂ.ಎ. ರಡ್ಡೇರ ಡಿಡಿಪಿಐ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.