ADVERTISEMENT

ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಧರಣಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2017, 9:45 IST
Last Updated 28 ಫೆಬ್ರುವರಿ 2017, 9:45 IST

ಬೇಲೂರು: ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಒತ್ತಾಯಿಸಿ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೊರಟಿಕೆರೆ ಪ್ರಕಾಶ್‌ ನೇತೃತ್ವದಲ್ಲಿ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಎಲ್ಲಾ ರಂಗದಲ್ಲೂ ಆಡಳಿತ ವೈಫಲ್ಯ ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬಸವೇಶ್ವರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಂತರ ತಾಲ್ಲೂಕು ಕಚೇರಿಯಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ADVERTISEMENT

ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೊರಟಿಕೆರೆ ಪ್ರಕಾಶ್‌ ‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಜನರು ಸಂಕಷ್ಟದ ಸ್ಥಿತಿ ಎದುರಿಸುತ್ತಿದ್ದಾರೆ. ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬಗರ್‌ಹುಕುಂ ಸಾಗುವಳಿಯಡಿ ಅರ್ಜಿ ವಿಲೇವಾರಿ ಮಾಡುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ. ಮಾರ್ಚ್‌ 31ರೊಳಗೆ ಅರ್ಜಿ ವಿಲೇವಾರಿ ಸಂಬಂಧ ಸೂಕ್ತ ವರದಿ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದ್ದರೂ ಶಾಸಕ ವೈ.ಎನ್‌.ರುದ್ರೇಶ್‌ಗೌಡರ ನೇತೃತ್ವದ ಬಗರ್‌ಹುಕುಂ ಸಮಿತಿ ಇಲ್ಲಿಯವರೆಗೆ ಕೇವಲ 150 ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಬಡರೈತರಿಗೆ ಅನ್ಯಾಯ ಎಸಗುತ್ತಿದೆ. 15 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ, ತಾಲ್ಲೂಕು ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸಲಾಗುವದು’ ಎಂದು ಎಚ್ಚರಿಸಿದರು.

ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ರೇಣುಕುಮಾರ್‌ ಮಾತನಾಡಿ, ‘ಶಾಸಕ ವೈ.ಎನ್‌.ರುದ್ರೇಶ್‌ಗೌಡ ಅವರು ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯ ಮಾಡದೇ ಕಾಲಹರಣ ಮಾಡುತ್ತಿದ್ದಾರೆ. ಕುಡಿಯುವ ನೀರಿಗೆ ಹಾಹಾಕಾರದ ಪರಿಸ್ಥಿತಿ ಇದ್ದರೂ ಅದನ್ನು ಬಗೆಹರಿಸಲು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.

ಬಿಜೆಪಿ ಮುಖಂಡರಾದ ಇ.ಎಚ್‌.ಲಕ್ಷ್ಮಣ್‌, ಕಿಟ್ಟಿ ನವಿಲಹಳ್ಳಿ, ಬಿ.ಎಂ.ರವಿಕುಮಾರ್‌, ಶೋಭಾ ಗಣೇಶ್‌, ಜಿ.ಕೆ.ಕುಮಾರ್‌, ವಿಜಯಲಕ್ಷ್ಮಿ, ಅರುಣ್‌ಕುಮಾರ್‌ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.