ADVERTISEMENT

ಇವಿಎಂ ಬಿಟ್ಟು; ಬ್ಯಾಲೆಟ್‌ ಬಳಕೆಗೆ ಮನವಿ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 9:47 IST
Last Updated 20 ಮಾರ್ಚ್ 2018, 9:47 IST
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಡಾ. ಜಿ.ಪರಮೇಶ್ವರ್ ಅವರು ಹಾಸನದಲ್ಲಿ ಸೋಮವಾರ ಪರಿಶೀಲನೆ ನಡೆಸಿದರು
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಡಾ. ಜಿ.ಪರಮೇಶ್ವರ್ ಅವರು ಹಾಸನದಲ್ಲಿ ಸೋಮವಾರ ಪರಿಶೀಲನೆ ನಡೆಸಿದರು   

ಹಾಸನ: ‘ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವಂತೆ ಎಲ್ಲೆಡೆ ಒತ್ತಾಯ ಕೇಳಿಬರುತ್ತಿದೆ. ಈ ಸಂಬಂಧ ಚುಣಾವಣೆ ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಮಾರ್ಚ್‌ 21ರಮದು ಜಿಲ್ಲಾ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ; ಸೋಮವಾರ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ವಿಧಾನಸಭೆ ಚುನಾವಣೆಯಲ್ಲಿ ಮತಯಂತ್ರ (ಇವಿಎಂ) ಬಳಕೆ ಬೇಡ ಅಂತ ಎಐಸಿಸಿ ಅಧಿವೇಶನದಲ್ಲಿ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ. ಅದನ್ನು ಶೀಘ್ರವೇ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು. ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಿ ಅನ್ನೋದು ನಮ್ಮ ಆಗ್ರಹವಾಗಿದೆ’ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುವ ರೀತಿಯಲ್ಲಿ ಟ್ವೀಟ್ ಮಾಡಿದ್ದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರ ಹರ್ಷ ಮೊಯ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಿಮ್ಮ ಪಾತ್ರ ಏನು? ಎಂದು ಕಾರಣ ಕೇಳಲಾಗಿದೆ. ಅವರಿಂದ ಸೂಕ್ತ ಉತ್ತರ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಪರಮೇಶ್ವರ್; ಪ್ರಜಾಪ್ರಭುತ್ವದ ಪ್ರಕಾರ ಸಾಧಕ-ಬಾಧಕ ನೋಡಿ ದೂರದೃಷ್ಟಿ ಉದ್ದೇಶದಿಂದ ಪಕ್ಷ ಒಂದು ತೀರ್ಮಾನ ಮಾಡಿದೆ. ಇದಕ್ಕೆ ಎಲ್ಲರೂ ಬದ್ಧರಾಗಿರಬೇಕು’ ಎಂದು ಹೇಳಿದರು.

‘ಜೆಡಿಎಸ್ ಬಂಡಾಯ ಶಾಸಕರು ಮಾರ್ಚ್ 25ರಂದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಆ ನಂತರ ಅದರ ಬಗ್ಗೆ ಚರ್ಚೆ ಮಾಡಲಾಗುತ್ತದೆ’ ಎಂದು ಉತ್ತರಿಸಿದರು.

21ರಂದು ಹಾಸನಕ್ಕೆ ರಾಹುಲ್: ‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂರನೇ ಹಂತದ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾರ್ಚ್‌ 21ರಂದು ಹಾಸನಕ್ಕೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ’ ಎಂದು ಹೇಳಿದರು.

‘20ರಂದು ಮಂಗಳೂರಿಗೆ ಆಗಮಿಸಿ ಎರಡು- ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ 21ರಂದು ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡುವರು. ನಂತರ ಅಲ್ಲಿಂದ ಚಿಕ್ಕಮಗಳೂರು ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಹಾಸನಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ಮೈಸೂರಿಗೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ’ ಎಂದರು.

‘24 ಮತ್ತು 25ರಂದು ಸಹ ರಾಜ್ಯ ಪ್ರವಾಸವನ್ನು ಮಾಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಜಿ.ಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ಕೆಪಿಸಿಸಿ ಕಾರ್ಯದರ್ಶಿ ಶಾರದಾ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್, ಕೆಪಿಸಿಸಿ ಸದಸ್ಯ ಎಚ್.ಕೆ.ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.