ADVERTISEMENT

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ

ಸ್ವೀಪ್ ಸಮಿತಿಯ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯಲ್ಲಿ ಸಿಇಒ

​ಪ್ರಜಾವಾಣಿ ವಾರ್ತೆ
Published 6 ಮೇ 2018, 10:49 IST
Last Updated 6 ಮೇ 2018, 10:49 IST

ಹಾಸನ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಅಹಿತಕರ ಘಟನೆಗೆ ಅವಕಾಶ ನೀಡದೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯನಿರ್ವಾಹಕ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಸಭೆಯಲ್ಲಿ ಸ್ವೀಪ್ ಸಮಿತಿಯ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲಿಸಿ, ಚುನಾವಣಾ ಅವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಇಲ್ಲಿಯವರೆಗೆ ಸ್ವೀಪ್ ಕಾರ್ಯ ಚಟುವಟಿಕೆಗಳು ಉತ್ತಮವಾಗಿದ್ದು, ಮುಂದೆಯೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಫ್ಲೈಯಿಂಗ್ ಸ್ಕ್ವಾಡ್‌ ಹಾಗೂ ಎಂ.ಸಿ.ಸಿ. ತಂಡದವರು ಜಾಗರೂಕವಾಗಿ ಕಾರ್ಯನಿರ್ವಹಿಸಬೇಕು. ಮೇ 8ರಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಮತದಾನ ಜಾಗೃತಿ ಸಮಾವೇಶಕ್ಕೆ ಸೂಕ್ತ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ADVERTISEMENT

ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಇರುವ ಬಗ್ಗೆ ಪರಿಶೀಲಿಸಿ, ಸುಸ್ಥಿತಿಯಲ್ಲಿರುವಂತೆ ಕ್ರಮವಹಿಸಲು ಹಾಗೂ ಅಂಗವಿಕಲರಿಗೆ ಅಗತ್ಯವಿರುವ ವ್ಹೀಲ್ ಚೇರ್, ದೃಷ್ಟಿದೋಷದವರಿಗೆ ಬೂತಗನ್ನಡಿ ವ್ಯವಸ್ಥೆ ಕೈಗೊಳ್ಳಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಮತದಾನದ ದಿನದಂದು ಚುನಾವಣಾ ಕಾರ್ಯಕ್ಕೆ ಶಾಲೆಯ ಬಿಸಿಯೂಟ ಸಿಬ್ಬಂದಿ ಬಳಸಿಕೊಂಡು ಊಟದ ವ್ಯವಸ್ಥೆ ಮಾಡುವಂತೆ ಬಿಸಿಯೂಟ ಯೋಜನೆ ಉಸ್ತುವಾರಿ ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ನಿಗದಿಯಾಗಿರುವಂತೆ ಕನಿಷ್ಠ ಎರಡು ಪಿಂಕ್ ಮತಗಟ್ಟೆಗಳನ್ನು ಸಿದ್ಧಪಡಿಸಬೇಕು. ಮತದಾರರ ಚೀಟಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿ ಸಹಿಯನ್ನು ಹೊಂದಿರುವ ಅಪೀಲು ಪತ್ರಗಳನ್ನು ಪ್ರತಿ ಮನೆ ಮನೆಗೆ ತಲುಪುವಂತೆ ಗಮನಹರಿಸಬೇಕು ಎಂದರು.

ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ, ಮತದಾನ ಜಾಗೃತಿ, ಬೀದಿ ನಾಟಕ ಪ್ರದರ್ಶನ ಹಾಗೂ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಒಂದರಂತೆ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸುವುದು ಹಾಗೂ ಚುನಾವಣೆ ಜಿಂಗಲ್ಸ್‌ಗಳನ್ನು ವಾಹನದ ಮೂಲಕ ಪ್ರಸಾರ ಮಾಡಿಸಬೇಕು. ಚುನಾವಣಾ ಜಾಹೀರಾತು ಸಂದೇಶದ ಪೋಸ್ಟರ್‌ಗಳನ್ನು ಮತಗಟ್ಟೆಯಲ್ಲಿ ಹಾಕುವಂತೆ ಸಲಹೆ ನೀಡಿದರು.

ಜಿ.ಪಂ ಯೋಜನಾ ನಿರ್ದೇಶಕ ಸಿದ್ದರಾಜು, ಸಮಿತಿಯ ಕಾರ್ಯದರ್ಶಿ ವಿನೋದ್‌ಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.