ADVERTISEMENT

ಬಾರದ ಬರ ಪರಿಹಾರ ಅನುದಾನ

​ಪ್ರಜಾವಾಣಿ ವಾರ್ತೆ
Published 12 ಜನವರಿ 2017, 6:45 IST
Last Updated 12 ಜನವರಿ 2017, 6:45 IST

ಹಾಸನ: ಬರ ಪೀಡಿತ ಪ್ರದೇಶದಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು ಸರ್ಕಾರ ಘೋಷಿಸಿದ್ದ ₹ 64 ಲಕ್ಷ ಇನ್ನೂ ಬಿಡುಗಡೆಯಾಗಿಲ್ಲ ಎಂದು ಶಾಸಕ ಎಚ್‌.ಡಿ.ರೇವಣ್ಣ ಆರೋಪಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಏಳು ತಾಲ್ಲೂಕುಗಳನ್ನು ಬರ ಪಿಡೀತ ಪ್ರದೇಶವೆಂದು ಘೋಷಿಸಿ ನಾಲ್ಕು ತಿಂಗಳಾಗಿದೆ. ಕುಡಿಯುವ ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹ 64 ಲಕ್ಷ ಬಿಡುಗಡೆ ಮಾಡುವುದಾಗಿ ಹೇಳಿ ಎರಡು ತಿಂಗಳು ಕಳೆದರೂ ಜಿಲ್ಲಾಧಿಕಾರಿ ಖಾತೆಗೆ ಹಣ ಜಮಾ ಆಗಿಲ್ಲ. ಹಣ ಇಲ್ಲದೆ ಕಾಮಗಾರಿ ಕೈಗೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಕುಡಿ ಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಜಾನುವಾರುಗಳು ಮೇವಿಲ್ಲದೆ ಸಾಯುತ್ತಿವೆ ಎಂದರು ಆಕ್ರೋಶ ವ್ಯಕ್ತಪಡಿಸಿದರು.

2015–16ನೇ ಸಾಲಿನಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲೂ 10 ಪೈಸೆ ಅನುದಾನ ಬಿಡುಗಡೆ ಆಗಿಲ್ಲ. ಇಲ್ಲಿ ರಾಜಕೀಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಎಷ್ಟು ಹಣ ಬಿಡುಗಡೆ ಯಾಗಿದೆ ಎಂಬುದನ್ನು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸ್ಪಷ್ಟಪಡಿಸಲಿ. 300ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಸಂಸದ ಎಚ್‌.ಡಿ.ದೇವೇಗೌಡರು ಜಿಲ್ಲಾಡಳಿತಕ್ಕೆ ಪತ್ರ ಬರೆದರು. ಆದರೆ ಜಿಲ್ಲಾಧಿಕಾರಿ ಅವರು ಅದನ್ನು ಸರ್ಕಾರಕ್ಕೆ ವರದಿ ಸಲ್ಲಿಸುವಲ್ಲಿ ವಿಳಂಬ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಪಹಣಿ ನೀಡುತ್ತಿಲ್ಲ. ಪಹಣಿ ಇಲ್ಲದಿದ್ದರೆ ವಿಮೆ ಮಾಡಿಸಲು ಆಗುವು ದಿಲ್ಲ. ಕುಡಿಯುವ ನೀರಿಗೆ ವಾರದಲ್ಲಿ ಅನುದಾನ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅಡುಗೆ ಮಾಡಿಕೊಂಡು ಅಲ್ಲಿಯೇ ಮಲಗುತ್ತೇವೆ ಎಂದು ಎಚ್ಚರಿಸಿದರು.

ಬರ ಪರಿಹಾರ ಕಾಮಗಾರಿಗಾಗಿ ₹ 1.30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂಬ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವುದೇ ಮಾಹಿತಿ ಇಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲೂ ₹ 52 ಕೋಟಿ ಬಿಡುಗಡೆ ಆಗಿಲ್ಲ. ಸಚಿವರು ಯಾವು ದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜನರ ಬದುಕಿನ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರ ಪರಿಹಾರ ಕಾಮಗಾರಿ ನಿರ್ವ ಹಣೆಗಾಗಿ ಜಿಲ್ಲೆಗೆ ನೋಡೆಲ್‌ ಅಧಿಕಾರಿ ನೇಮಕ ಮಾಡಲಿ. ಕುಡಿಯುವ ನೀರು ಪೂರೈಸಲು ಹಾಗೂ ಜಾನುವಾರುಗಳಿಗೆ ಮೇವು ವಿತರಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಾಕಭಿಷೇಕ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸಭೆ ಕರೆದಿಲ್ಲ. ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಯಾವುದೇ ಆಸೆ, ಆಕಾಂಕ್ಷೆ ಇಟ್ಟು ಕೊಂಡಿಲ್ಲ. ಶೃಂಗೇರಿ ಮತ್ತು ಚಾರುಕೀರ್ತಿ ಸ್ವಾಮೀಜಿ ಮೇಲೆ ಅಪಾರ ಗೌರವ ಇದೆ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಚಿವರು ಸಭೆ ನಡೆಸಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ನುಡಿದರು. ಶಾಸಕ ಎಚ್‌.ಎಸ್‌.ಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.