ADVERTISEMENT

ಮತದಾನ ಜಾಗೃತಿ: ಜಿಲ್ಲಾಧಿಕಾರಿ ‘ಓಟ’

ನಗರದಲ್ಲಿ ಜಾಥಾ ನಡೆಸಿದ ಐದು ಸಾವಿರ ಮಂದಿ

​ಪ್ರಜಾವಾಣಿ ವಾರ್ತೆ
Published 9 ಮೇ 2018, 12:11 IST
Last Updated 9 ಮೇ 2018, 12:11 IST
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮತದಾನ ಜಾಗೃತಿ ಓಟದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಪಿ.ಸಿ.ಜಾಫರ್, ಸಿಇಒ ಜಗದೀಶ್‌.
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮತದಾನ ಜಾಗೃತಿ ಓಟದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಪಿ.ಸಿ.ಜಾಫರ್, ಸಿಇಒ ಜಗದೀಶ್‌.   

ಹಾಸನ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ವಿಶಿಷ್ಟ ರೀತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳು ನಡೆದವು.

ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ಸರ್ಕಾರಿ, ಖಾಸಗಿ ಐ.ಟಿ.ಐ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಒಳಗೊಂಡಂತೆ 5000 ಕ್ಕೂ ಅಧಿಕ ಮಂದಿ ಜಾಗೃತಿ ಜಾಥಾಕ್ಕೆ ಸಾಕ್ಷಿಯಾದರು.

ಮೊದಲಿಗೆ ವಿದ್ಯಾರ್ಥಿಗಳು ಕಾಲೇಜುಗಳಿಂದ ಕ್ರೀಡಾಂಗಣದವರೆಗೆ ಮತದಾರರ ಜಾಗೃತಿ ನಡಿಗೆ ಮಾಡುವ ಮೂಲಕ ಆಗಮಿಸಿದರು. ನಂತರ ಕ್ರೀಡಾಂಗಣದಲ್ಲಿ ಮತದಾರರ ಜಾಗೃತಿ ಓಟಕ್ಕೆ ಜಿಲ್ಲಾಧಿಕಾರಿ ಪಿ.ಸಿ.ಜಾಫರ್ ಚಾಲನೆ ನೀಡಿ ತಾವೂ ಸಹ ಓಟದಲ್ಲಿ ಉತ್ಸುಕತೆಯಿಂದ ಭಾಗಿಯಾದರು. ಜಿಲ್ಲಾ ಪಂಚಾಯತ್ ಸಿಇಓ ಜಗದೀಶ್ ಹಾಗೂ ಹಲವು ಅಧಿಕಾರಿಗಳು ಓಟದಲ್ಲಿ ಪಾಲ್ಗೊಂಡರು ನಂತರ ಕ್ರೀಡಾಂಗಣದ ಉದ್ದಗಲಕ್ಕೂ ಮಾನವ ಸರಪಳಿಯನ್ನು ರಚಿಸುವ ಮೂಲಕ ಮತದಾರರ ಮಹತ್ವದ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.

ADVERTISEMENT

ಜಿಲ್ಲಾಧಿಕಾರಿ ಪಿ.ಸಿ. ಜಾಫರ್ ಮಾತನಾಡಿ, ಮೇ 12ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದಂತೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ನೆರೆಹೊರೆಯವರಿಗೂ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಗದೀಶ್ ಮಾತನಾಡಿ, ಎಲ್ಲರು ಒಟ್ಟಾಗಿ ಮತದಾನ ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ನೈತಿಕ ಮತದಾನಕ್ಕೆ ಹೆಚ್ಚನ ಪ್ರೋತ್ಸಾಹ ನೀಡಬೇಕು ಎಂದರು.

ಮಾಸ್ಟರ್ ಟ್ರೈನರ್‌ಗಳಿಂದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
ಇದೇ ವೇಳೆ ಜಿಲ್ಲಾಧಿಕಾರಿ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ನಗರಸಭೆಯ ಮತದಾರರ ಜಾಗೃತಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿದ್ದರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಮರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾಂತರಾಜು, ಅನನ್ಯ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಜಯಶ್ರೀ, ಕಲಾವಿದ ದೇಸಾಯಿ, ಸ್ವೀಪ್ ಸಮಿತಿಯ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.