ADVERTISEMENT

ಹಿರಿಯ ನಾಗರಿಕರನ್ನು ಗೌರವಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2014, 6:10 IST
Last Updated 2 ಅಕ್ಟೋಬರ್ 2014, 6:10 IST

ಹಾಸನ: ಮಕ್ಕಳಿಗೆ ಬಾಲ್ಯದಿಂದ ಗುರು– ಹಿರಿಯರನ್ನು ಗೌರವಿಸುವ, ಪ್ರೀತಿಸುವ ಗುಣಗಳನ್ನು ಕಲಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಆರ್‌.ಜೆ. ಸತೀಶ್‌ಸಿಂಗ್‌ ಅಭಿಪ್ರಾಯಪಟ್ಟರು.

ನಗರದ ಚೈತನ್ಯ ವೃದ್ಧಾಶ್ರಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದು ಹಣ ಗಳಿಕೆಯ ದೃಷ್ಟಿಯಿಂದ ಮಾತ್ರ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ಯುವಕರು ತಮ್ಮ ಹಿರಿಯರ ಜೊತೆಗಿನ ಭಾವನಾತ್ಮಕ ಸಂಬಂಧವನ್ನು ಮರೆಯುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ನೈತಿಕತೆ ಹಾಗೂ ಸಂಸ್ಕೃತಿಯ ಸತ್ವವನ್ನು ತಿಳಿಸುವ ಶಿಕ್ಷಣವನ್ನು ನೀಡಬೇಕಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್‌. ಗೋಪಾಲಕೃಷ್ಣ ಮಾತನಾಡಿ, ‘ಸರ್ಕಾರದಿಂದ ಹಿರಿಯ ನಾಗರಿರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಿಲ್ಲ.

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿರುವ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ತಮ್ಮ ತಂದೆ ತಾಯಿಯನ್ನು ಪೂಜ್ಯ ಭಾವನೆಯಿಂದ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ ಎಲ್ಲರ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ 65 ವರ್ಷ ಮೇಲಿನವರಿಗೆ ₨ 500 ಹಾಗೂ 80 ವರ್ಷ ಮೇಲಿನ ವೃದ್ಧರಿಗೆ ₨ 700 ಮಾಸಿಕ ಪಿಂಚಣಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಚೈತನ್ಯ ವೃದ್ಧಾಶ್ರಮದ ಅಧ್ಯಕ್ಷ ಡಾ.ಗುರುರಾಜ್‌ ಹೆಬ್ಬಾರ್‌, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯು.ಪಿ. ಸಿಂಗ್‌, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅನಂತರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶಿವಸ್ವಾಮಿ, ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಸರಸ್ವತಿ ಕೋ ಸುಂದರ್‌, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಸಬಲೀಕರಣ ಇಲಾಖೆಯ ಅಧಿಕಾರಿ ಮಲ್ಲೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.