ADVERTISEMENT

ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ, ಜಾನಪದ ವಿ.ವಿ.ಗೆ ಶರೀಫ ಹೆಸರು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 6:02 IST
Last Updated 22 ಸೆಪ್ಟೆಂಬರ್ 2017, 6:02 IST
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ದರಾಮಯ್ಯ (ಎಡದಿಂದ ಎರಡನೆಯವರು) ಜಿಲ್ಲೆಯ ಕನ್ನಡಪರ ಸಂಘಟನೆಗಳ ಜೊತೆ ಸಭೆ ನಡೆಸಿದರು. ಕನ್ನಡಪರ ಸಂಘಟನೆಯ ಮುಖಂಡರು ಅಹವಾಲು ಮಂಡಿಸಿದರು
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ದರಾಮಯ್ಯ (ಎಡದಿಂದ ಎರಡನೆಯವರು) ಜಿಲ್ಲೆಯ ಕನ್ನಡಪರ ಸಂಘಟನೆಗಳ ಜೊತೆ ಸಭೆ ನಡೆಸಿದರು. ಕನ್ನಡಪರ ಸಂಘಟನೆಯ ಮುಖಂಡರು ಅಹವಾಲು ಮಂಡಿಸಿದರು   

ಹಾವೇರಿ: ‘ಜಿಲ್ಲಾ ಕೇಂದ್ರದಲ್ಲಿ ‘ಕನ್ನಡ ಭವನ’ ನಿರ್ಮಿಸಬೇಕು ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಸಂತ ಶಿಶುನಾಳ ಶರೀಫರ ಹೆಸರು ಇಡಬೇಕು’ ಎಂದು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್. ಜಿ. ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಜಿಲ್ಲೆಯ ಕನ್ನಡ ಪರ ಸಂಘಟನೆಗಳ ಜೊತೆ ನಡೆಸಿದ ಸಭೆಯಲ್ಲಿ ಒತ್ತಾಯ ಕೇಳಿಬಂತು.

ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳೀಧರ ಮಾತನಾಡಿ, ‘ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಅದಕ್ಕಾಗಿ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ಕೇಳುತ್ತಿದ್ದೇವೆ’ ಎಂದರು.

ADVERTISEMENT

ಕನ್ನಡ ಪರ ಸಂಘಟನೆಯ ಕರಿಬಸವಯ್ಯ ಮಾತನಾಡಿ, ‘ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ಉಳಿಯಲು ಸಾಧ್ಯ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನಾಮಫಲಕಗಳಲ್ಲಿ ಕನ್ನಡೇತರ ಭಾಷೆಯ ಬಳಕೆ ವಿರುದ್ಧ ಹೋರಾಟ ಮಾಡಿದವರ ವಿರುದ್ಧ ದೂರು ದಾಖಲಿಸಲಾಗುತ್ತಿದೆ. ಈ ಬಗ್ಗೆ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ಜಯ ಕರ್ನಾಟಕ ಸಂಘಟನೆಯ ರಮೇಶ್ ಆನವಟ್ಟಿ ಮಾತನಾಡಿ, ‘ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡಿಮೆ ಆಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸುವಂತೆ ಆದೇಶ ಹೊರಡಿಸಬೇಕು. ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ, ಎಲ್ಲರಿಗೂ ಒಂದೇ ಪಠ್ಯಕ್ರಮ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.

‘ದಸರಾ ಮಹೋತ್ಸವದಲ್ಲಿ ಶಿಕ್ಷಣ ಸಚಿವರು ಉರ್ದು ಭಾಷೆಯಲ್ಲಿ ಸ್ವಾಗತಿಸಿರುವುದನ್ನು ಖಂಡಿಸುತ್ತೇವೆ’ ಎಂದರು. ಗ್ರಾಹಕರ ವೇದಿಕೆ ಸಂಘಟನೆಯ ಹೊನ್ನಪ್ಪ ಮಾತನಾಡಿ, ‘ಬ್ಯಾಂಕ್‌ಗಳಲ್ಲಿ ಇಂಗ್ಲಿಷ್‌ ಮತ್ತು ಹಿಂದಿಗೆ ಆದ್ಯತೆ ನೀಡುತ್ತಿದ್ದಾರೆ. ಕನ್ನಡವನ್ನು ಕಡೆಗಣಿಸುತ್ತಿದ್ದಾರೆ. ಇಲ್ಲಿನ ಸೌಲಭ್ಯಗಳನ್ನು ಬಳಸಿಕೊಳ್ಳುವ ಎಲ್ಲರೂ ಇಲ್ಲಿನ ಭಾಷೆಗೆ ಆದ್ಯತೆ ನೀಡುವುದನ್ನು ಕಡ್ಡಾಯ ಮಾಡಬೇಕು’ ಎಂದರು.

ರಾಜು ತಳವಾರ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಾಣ ಮಾಡಬೇಕು. ಬ್ಯಾಡಗಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿನ ಇತರ ಭಾಷಾ ನಾಮಫಲಕಗಳನ್ನು ತೆರವುಗೊಳಿಸಬೇಕು’ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೈ.ಬಿ. ಆಲದಕಟ್ಟಿ ಮಾತನಾಡಿ, ‘ರಾಜ್ಯದಲ್ಲಿರುವ ಎಲ್ಲ ಬಹುರಾಷ್ಟ್ರೀಯ ಕಂಪೆನಿಗಳು ಹಾಗೂ ಖಾಸಗಿ ಉದ್ದಿಮೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಜಿಲ್ಲಾ ನ್ಯಾಯಾಲಯಗಳಲ್ಲಿ ಕನ್ನಡದ ಆದೇಶ ಸಿಗುವಂತೆ ಮಾಡಬೇಕು’ ಎಂದು ಹೇಳಿದರು.

ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿದ್ದರಾಮಯ್ಯ ಮಾತನಾಡಿ, ‘ನಾಮಫಲಕ, ಶಿಕ್ಷಣ, ಉದ್ಯೋಗದ ಸಮಸ್ಯೆಗಳು ರಾಜ್ಯದಾದ್ಯಂತ ಇವೆ. ಪ್ರಾಧಿಕಾರವು ಬೆಂಗಳೂರನ್ನು ಆದ್ಯತೆಯಾಗಿ ತೆಗೆದುಕೊಂಡು ಕನ್ನಡ ಜಾರಿಗೊಳಿಸಲು ಕ್ರಮವಹಿಸುತ್ತಿದೆ. ಇದಕ್ಕೆ ಮೆಟ್ರೊ ಒಂದು ಉದಾಹರಣೆ. ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ’ ಎಂದರು.

‘ಬೆಂಗಳೂರಿನಲ್ಲಿ 16 ಇಲಾಖೆಗಳ ಪರಿಶೀಲನೆ ಮಾಡಿದ್ದೇವೆ. ಜಿಲ್ಲೆಗಳ ಪೈಕಿ ಹಾವೇರಿ 18ನೇ ಜಿಲ್ಲೆ. ಹಾವೇರಿ ಜಿಲ್ಲೆಗೆ ಸಂಬಂಧಿಸಿದಂತೆ ಲೀಡ್ ಬ್ಯಾಂಕ್ ಅಧಿಕಾರಿಗೆ ಕನ್ನಡ ಅನುಷ್ಠಾನದ ಬಗ್ಗೆ ಸೂಚನೆ ನೀಡಲಿದ್ದೇವೆ’ ಎಂದರು.

‘ಬ್ಯಾಂಕಿಂಗ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆ ಪ್ರಾಧಿಕಾರದ 13ಮಂದಿಯ ನಿಯೋಗವು ಕೇಂದ್ರ ಸಚಿವರಿಗೆ ಮನವಿ ಮಾಡಿದೆ. ಅವರು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರವು 2015 ರಲ್ಲಿ ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಹೊರಡಿಸಿದ್ದು, ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಭಾಷೆಯನ್ನಾಗಿ ಕಡ್ಡಾಯವಾಗಿ ಬೋಧಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.