ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಗಡೆ ಸಿ.ಎಂ.: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 8:58 IST
Last Updated 30 ಡಿಸೆಂಬರ್ 2017, 8:58 IST
ಲಿಂಗಾಯತ ಸಾಂಸ್ಕೃತಿಕ ಸಮಿತಿ:  ಬಸವರಾಜ ಹೊರಟ್ಟಿ
ಲಿಂಗಾಯತ ಸಾಂಸ್ಕೃತಿಕ ಸಮಿತಿ: ಬಸವರಾಜ ಹೊರಟ್ಟಿ   

ಹಾವೇರಿ: ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿ.ಎಸ್. ಯಡಿಯೂರಪ್ಪ ಅವರ ಬದಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಶುಕ್ರವಾರ ಇಲ್ಲಿ ಹೇಳಿದರು.

‘9 ಮಂದಿ ಲಿಂಗಾಯತ ಸಂಸದರು ಇದ್ದರೂ, ಯಾರನ್ನು ಸಚಿವರನ್ನಾಗಿ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಇವರೆನ್ನೆಲ್ಲಾ ಗುಡಿಯ ಹೊರಗೇ ಇಟ್ಟಿದ್ದಾರೆ. ಯಾರನ್ನು ಎಲ್ಲಿ ಇಡಬೇಕು ಎಂಬುದು ಆರ್‌ಎಸ್ಎಸ್‌ನವರಿಗೆ ಚೆನ್ನಾಗಿ ಗೊತ್ತಿದೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ಸಮಸ್ಯೆ ಬಗೆಹರಿಸಬೇಕು. ಅದು ಬಿಟ್ಟು ಪತ್ರದಿಂದ ವಿವಾದ ಬಗೆಹರಿಯಲ್ಲ. ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಬದಲು ಪ್ರಧಾನಿ ಮೋದಿಗೆ ಮನವಿ ಮಾಡಲಿ’ ಎಂದು ಆಗ್ರಹಿಸಿದರು.

ADVERTISEMENT

‘ಕೋಮುಗಲಭೆ, ಟಿಪ್ಪು ಜಯಂತಿ ವಿವಾದ ಹಾಗೂ ಸಚಿವ ಹೆಗಡೆ ಹೇಳಿಕೆಯಿಂದಾಗಿ ರಾಜ್ಯದಲ್ಲಿ ಉಸಿರು ಕಟ್ಟುವ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ಶಾಸಕರೇ ಆಪ್ತವಾಗಿ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಯು ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.