ADVERTISEMENT

ಸಿ.ಎಂ. ಸಿದ್ದರಾಮಯ್ಯ ಜಿಲ್ಲೆಗೆ 23ಕ್ಕೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2017, 10:23 IST
Last Updated 13 ಡಿಸೆಂಬರ್ 2017, 10:23 IST

ಹಾವೇರಿ: ಡಿಸೆಂಬರ್ 23 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಭೇಟಿ ನೀಡಲಿದ್ದು, ಹಾವೇರಿ ಮತ್ತು ಬ್ಯಾಡಗಿ ವಿಧಾನಸಭಾ ಕ್ಷೇತ್ರಗಳ ಸುಮಾರು ₹300 ಕೋಟಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಮಾಹಿತಿ ನೀಡಿದರು. ಹಾವೇರಿ ಮತ್ತು ಬ್ಯಾಡಗಿ ಕ್ಷೇತ್ರದ ಕಾಮಗಾರಿಗಳಿಗೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ನಿರ್ಧರಿಸಲಾಯಿತು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕಿರುಹೊತ್ತಿಗೆ ಬಿಡುಗಡೆ ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕಿರುಹೊತ್ತಿಗೆಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಲಾಯಿತು. ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಿಸಲು ನಿರ್ಧರಿಸಲಾಯಿತು.

ADVERTISEMENT

ಜಿಲ್ಲೆಯಲ್ಲಿ ನಡೆದಿರುವ ತುಂಗಾ ಮೇಲ್ದಂಡೆ ನೀರಾವರಿ ಯೋಜನೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಂಡಿರುವ ಯೋಜನೆಗಳು, ಪೋಡಿಮುಕ್ತ, ಸ್ಮಶಾನ ಯುಕ್ತ, ಕೃಷಿಹೊಂಡ, ಶುದ್ಧ ನೀರಿನ ಘಟಕಗಳ ಕುರಿತು ಅಭಿವೃದ್ಧಿ ಕಿರುಚಿತ್ರಗಳನ್ನು ತಯಾರಿಸಲು ನಿರ್ಧರಿಸಲಾಯಿತು. ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ನಡೆಸುವ ಕುರಿತಂತೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಯಿತು.

ಶಾಸಕ ಬಸವರಾಜ ಶಿವಣ್ಣನವರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ.ವಿ. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ.ಅಂಜನಪ್ಪ ಮತ್ತಿತರರು ಇದ್ದರು.

ಮುಖ್ಯಮಂತ್ರಿಗಳು ಜಿಲ್ಲೆಗೆ ಅತಿ ಹೆಚ್ಚು ಅನುದಾನ ನೀಡಿದ್ದು, ಅಭಿವೃದ್ಧಿ ಕುರಿತು ವಿಧಾನ ಸಭಾ ಕ್ಷೇತ್ರವಾರು ಕಿರು ಹೊತ್ತಿಗೆ ಬಿಡುಗಡೆ ಮಾಡಲಾಗುವುದು
ರುದ್ರಪ್ಪ ಲಮಾಣಿ
ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.