ADVERTISEMENT

ರೈತರ ಸಾಲ ಮನ್ನಾ ಮಾಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2017, 8:54 IST
Last Updated 8 ಏಪ್ರಿಲ್ 2017, 8:54 IST

ಕಲಬುರ್ಗಿ: ಉತ್ತರ ಪ್ರದೇಶ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವ ರೀತಿ ರಾಜ್ಯ ಸರ್ಕಾರವೂ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬಸವರಾಜ ಇಂಗಿನ್‌ ಶುಕ್ರವಾರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಬರ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಇನ್ನೂ ರೈತರ ಖಾತೆಗೆ ಜಮಾ ಮಾಡಿಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರನ್ನು ಹಾಗೂ ರೈತರನ್ನು ಅನೇಕ ಭಾಗಗಳಾಗಿ ವಿಂಗಡಿಸಿ ಕೇವಲ ಮತ ಬ್ಯಾಂಕ್‌ ಮಾಡುವಲ್ಲಿ ನಿರತವಾಗಿದ್ದು, ಬರದ ಸಂಕಷ್ಟದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ನೆರವಿಗೆ ಬರುತ್ತಿಲ್ಲ ಎಂದು ಕಿಡಿಕಾರಿದರು.

ADVERTISEMENT

ಏ.15ರ ನಂತರವೂ ತೊಗರಿ ಖರೀದಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವನ್ನು  ರಾಜ್ಯದ ಕೃಷಿ ಸಚಿವರು ಕೋರಿದ್ದಾರೆ. ಆದರೆ, ರಾಜ್ಯ ಸರ್ಕಾರ ರೈತರು ಬೆಳೆದಿರುವ ತೊಗರಿ ಖರೀದಿ ಮುಗಿಯುವವರೆಗೆ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಬರ ನಿರ್ವಹಣೆಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಕೇಂದ್ರದಿಂದ ಸಾಕಷ್ಟು ಅನುದಾನ ಬಿಡುಗಡೆಯಾದರೂ ಅದನ್ನು ಸರಿಯಾಗಿ ಬಳಸುತ್ತಿಲ್ಲ ಎಂದು ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಕಲಬುರ್ಗಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಜೇಂದ್ರ ಕರೆಕಲ್‌, ಮಲ್ಲಿನಾಥ ಪಾಟೀಲ, ಮಲ್ಲಿಕಾರ್ಜುನ ಪಾಟೀಲ ಹುಳೇಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.