ADVERTISEMENT

ವಿವಿಧ ಬೇಡಿಕೆ: ನಗರದಲ್ಲಿ ನಾಲ್ಕು ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2017, 5:48 IST
Last Updated 18 ಫೆಬ್ರುವರಿ 2017, 5:48 IST
ಕಲಬುರ್ಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
 
ಕಾರ್ಯಕರ್ತರ ಬಿಡುಗಡೆಗೆ ಆಗ್ರಹ: ಪೊಲೀಸರು ವಶಕ್ಕೆ ಪಡೆದಿರುವ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
 
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 10ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಿಂಗ್ ರಸ್ತೆಯ ಟಿಪ್ಪು ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಲು ಪೊಲೀಸರ ಅನುಮತಿ ಪಡೆಯಲಾಗಿತ್ತು. ಆದರೆ ಪೊಲೀಸರು ಇದ್ದಕ್ಕಿದ್ದಂತೆ ಧ್ವಜಾರೋಹಣಕ್ಕೆ ಅವಕಾಶ ನೀಡದೆ 22 ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬೇರೆ ಸಂಘಟನೆಗಳಿಗೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವ ಪೊಲೀಸರು, ಪಿಎಫ್‌ಐ ಧ್ವಜಾರೋಹಣಕ್ಕೆ ತಡೆವೊಡ್ಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕೆಲವು ದಿನಗಳ ಹಿಂದೆ ಆರ್‌ಎಸ್‌ಎಸ್ ಕಾರ್ಯಕರ್ತರು ಖಿಲ್ಲಾ ಪ್ರದೇಶದಲ್ಲಿ ಪಥಸಂಚಲನ ಹಮ್ಮಿಕೊಂಡಿದ್ದರು. ಖಿಲ್ಲಾ ಮುಸ್ಲಿಮರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶವಾದ್ದರಿಂದ ಪಥಸಂಚನದ ಮಾರ್ಗ ಬದಲಾಯಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು. 
ಆದರೆ ಪೊಲೀಸರು ಮಾರ್ಗ ಬದಲಾವಣೆ ಮಾಡದೆ, ದೂರು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬಗೆ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು.
 
ಪೊಲೀಸರು ವಶಕ್ಕೆ ಪಡೆದಿರುವ 22 ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹೀಮ್ ಪಟೇಲ್, ಜಿಲ್ಲಾ ಅಧ್ಯಕ್ಷ ಸೈಯದ್ ಜಾಕೀರ್, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ಮೌಲಾನಾ ಅತೀಖುರ್ ಇದ್ದರು.
 
ಕೂಲಿ, ಕೆಲಸದ ದಿನ ಹೆಚ್ಚಿಸಿ: ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಮತ್ತು ಕೆಲಸದ ದಿನಗಳನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯುಯು)ದ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿದರು.
 
ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಆಳಂದ ತಾಲ್ಲೂಕು ಶ್ರೀಚಂದ ಪಂಚಾಯಿತಿ ವ್ಯಾಪ್ತಿಯ ಹೊಡಲ್‌ನಲ್ಲಿ ಕೆಲಸ ಮಾಡಿದ ಕಾರ್ಮಿಕರ ಬಾಕಿ ವೇತನ ಬಿಡುಗಡೆ ಮಾಡಬೇಕು. ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.
 
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಕೆಲಸ ನೀಡಬೇಕು. ಶೂನ್ಯ ಖಾತೆಯಲ್ಲಿ ಬ್ಯಾಂಕ್ ಖಾತೆ ತೆರೆಯಬೇಕು. ಎಲ್ಲರಿಗೂ ಉದ್ಯೋಗ ಚೀಟಿ ವಿತರಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮುಖಂಡರಾದ ಮೋಹನ ಕಟ್ಟಿಮನಿ, ಮಲ್ಲಮ್ಮ ಕೋಡ್ಲಿ, ಚಂದಪ್ಪ ಪೂಜಾರಿ, ಜಯಶ್ರೀ ಕಟ್ಟಿಮನಿ, ಅಶೋಕ ಹುಳಗೇರಾ, ಜಗದೇವಿ ಚಂದನಕೇರಾ ಇದ್ದರು.
 
ಮೂಲ ಸೌಕರ್ಯಕ್ಕೆ ಒತ್ತಾಯ: ಬೀದಿ ವ್ಯಾಪಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ಸದಸ್ಯರು ನಗರದ ಪಾಲಿಕೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿದರು.
 
ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ, ನೀರು, ವಿದ್ಯುತ್ ಸಂಪರ್ಕ ಒದಗಿಸಬೇಕು. 20 ವರ್ಷಗಳಿಂದ ಬೀದಿ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಎಲ್ಲರಿಗೂ ತಲಾ ₹25 ಸಾವಿರ ಸಹಾಯಧನ ನೀಡಬೇಕು. ಸೂಪರ್ ಮಾರ್ಕೆಟ್‌ನಲ್ಲಿ ತೆರವುಗೊಳಿಸಿರುವ ಬೀದಿ ವ್ಯಾಪಾರಿಗಳಿಗೆ ಕೂಡಲೇ ಸ್ಥಳಾವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
 
ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಜಿಲ್ಲಾ ಘಟಕದ ಅಧ್ಯಕ್ಷ ಅಮೃತ ಪಾಟೀಲ ಸಿರನೂರ, ಪದಾಧಿಕಾರಿಗಳಾದ ರವಿ ಒಂಟಿ, ಸಚಿನ್ ಫರಹತಾಬಾದ್, ವ್ಯಾಪಾರಿಗಳಾದ ಶಿವಕುಮಾರ ಬಾಗೋಡಿ, ಭಾಗಮ್ಮ ಚೌಧರಿ, ಸರೂಬಾಯಿ ಭೋವಿ ಇದ್ದರು.
ವಸತಿ ನಿಲಯ ವಿದ್ಯಾರ್ಥಿಗಳ ಆಕ್ರೋಶ: ಇಲ್ಲಿನ ಶಕ್ತಿ ನಗರದಲ್ಲಿರುವ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಅಲ್ಲಿನ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
 
ವಸತಿ ನಿಲಯದಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು. ದಿನ ಪತ್ರಿಕೆ, ಮಾಸ ಪತ್ರಿಕೆ, ಕ್ರೀಡಾ ಸಾಮಗ್ರಿ ಒದಗಿಸಬೇಕು. ಕುರ್ಚಿ, ಮೇಜು, ಬೆಡ್‌ಶೀಟ್, ಟಿ.ವಿಗಳನ್ನು ವಿತರಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು.ವಿದ್ಯಾರ್ಥಿಗಳಾದ ರಾಜಶೇಖರ್ ಜೆ., ಪ್ರೇಮಗೌಡ ಪಾಟೀಲ, ಸಿದ್ದರಾಜ, ರವಿಕುಮಾರ್, ಆದಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.