ADVERTISEMENT

200 ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಗುರಿ

ಜಿಲ್ಲಾ ಪಂಚಾಯಿತಿ ಸಿಇಒ ಹೆಪ್ಸಿಬಾರಾಣಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 6:07 IST
Last Updated 13 ಜುಲೈ 2017, 6:07 IST

ಕಲಬುರ್ಗಿ: ‘ಅಕ್ಟೋಬರ್ 2ರ ವರೆಗೆ ಜಿಲ್ಲೆಯ 200 ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳು ಎಂದು ಘೋಷಿಸಲು ಯೋಜನೆ ಹಾಕಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಆಲಗೂಡ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ತಾಲ್ಲೂಕಿನ ಆಲಗುಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೂರ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ‘ಕೂಸು’ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ 2017ರ ಮೇ 13ರಂದು ಗರ್ಭಿಣಿಯರ ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛ ಭಾರತ ಮಿಷನ್ ಅಡಿ ಕೂಸು ಕಾರ್ಯಕ್ರಮ ಪ್ರಾರಂಭಿಸಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

‘ಜಿಲ್ಲೆಯಲ್ಲಿ 10ಸಾವಿರ ವೈಯಕ್ತಿಕ ಶೌಚಾಲಯ ನಿರ್ಮಿಸುವ ಗುರಿ ಹೊಂದಿದ್ದು, ಈಗಾಗಲೇ 11 ಸಾವಿರ ಶೌಚಾಲಯ ನಿರ್ಮಿಸಲಾಗಿದೆ. ಈ ಕಾರ್ಯಕ್ರಮದ ಅನುಷ್ಠಾನದಲ್ಲಿ ಕಲಬುರ್ಗಿ ತಾಲ್ಲೂಕು ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದೆ.

ಗರ್ಭಿಣಿಯರ ಮನೆಗಳಲ್ಲಿ ಶೌಚಾಲಯ ನಿರ್ಮಿಸಿದರೆ ಅಂಥ ಗರ್ಭಿಣಿಯರಿಗೆ ಗ್ರಾಮ ಪಂಚಾಯಿತಿಯಿಂದ ಸೀಮಂತ ನೆರವೇರಿಸಲಾಗುತ್ತಿದೆ. 6ರಿಂದ ಪಿಯುಸಿ ತನಕ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಮನೆಗಳಲ್ಲಿಯೂ ಶೌಚಾಲಯ ನಿರ್ಮಿಸುವ ಕಾರ್ಯಕ್ರಮ ರೂಪಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.

‘ಶೌಚಕ್ರಿಯೆಗೆ ಹೊರಗೆ ಹೋಗಲು ತೊಂದರೆಯಾಗುತ್ತಿತ್ತು. ಈಗ ಮನೆಯಲ್ಲಿಯೇ ಶೌಚಾಲಯ ನಿರ್ಮಿಸಿದ್ದು ಅನುಕೂಲವಾಗಿದೆ’ ಎಂದು ಗರ್ಭಿಣಿಯರಾದ ಮಹಾದೇವಿ, ಸಂಗೀತಾ, ನಿರ್ಮಲಾ ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಕಾಂತ ಜೀವಣಗಿ ಮಾತನಾಡಿ, ‘ಆಗಸ್ಟ್ 15ರೊಳಗೆ ತಾಲ್ಲೂಕಿನ 41 ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು  ಘೋಷಿಸಲಾಗುವುದು. ಕೆರೂರ ಗ್ರಾಮದಲ್ಲಿರುವ 165 ಕುಟುಂಬಗಳ ಪೈಕಿ ಈಗಾಗಲೇ 125 ಕುಟುಂಬಗಳು ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದು, ಆಗಸ್ಟ್ 15ರೊಳಗೆ ಉಳಿದ ಶೌಚಾಲಯ ನಿರ್ಮಿಸಲಾಗುವುದು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತಾ ಸುಧಾಕರ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಸಜ್ಜನ್, ಸದಸ್ಯ ರಶೀದ್ ಪಟೇಲ್ ಹಾಗೂ ಪಾರ್ವತಿ ಸಲಗರ, ಬಿ.ಕೆ.ಡಿ.ಬಿ. ಸದಸ್ಯ ವೈಜನಾಥ ತಡಕಲ್, ಓಕಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.