ADVERTISEMENT

371 (ಜೆ) ನ್ಯೂನತೆ ರಾಹುಲ್‌ಗೆ ಮನವಿ: ವೈಜನಾಥ ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2018, 11:13 IST
Last Updated 11 ಫೆಬ್ರುವರಿ 2018, 11:13 IST

ಕಲಬುರ್ಗಿ: ‘371 (ಜೆ) ಕಾಯ್ದೆಯಲ್ಲಿ ನ್ಯೂನತೆ ಸರಿಪಡಿಸಲು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಒಟ್ಟು 6,022 ಡಾಟಾ ಎಂಟ್ರಿ ಹುದ್ದೆಗಳಿಗೆ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ 371 (ಜೆ) ಕಾಯ್ದೆಯಡಿ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಿರಲಿಲ್ಲ. ಈ ಬಗ್ಗೆ ಹೋರಾಟ ಮಾಡಿದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೇಮಕಾತಿಗೆ ತಾತ್ಕಾಲಿಕ ತಡೆ ನೀಡಿತ್ತು. ಆದರೆ ಮೀಸಲಾತಿ ಕಲ್ಪಿಸಿ, ಹೊಸ ಅಧಿಸೂಚನೆ ಹೊರಡಿಸದ ಕಾರಣ ಹುದ್ದೆಯ ಆಕಾಂಕ್ಷಿಗಳು ತೊಂದರೆ ಅನುಭವಿಸುವಂತಾಗಿದೆ’ ಎಂದು ತಿಳಿಸಿದ್ದಾರೆ.

‘ಕಾನೂನು ಇಲಾಖೆಯಿಂದ 100 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ ಈಚೆಗೆ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲೂ ಮೀಸಲಾತಿ ನಿಯಮಾವಳಿ ಉಲ್ಲಂಘಿಸಲಾಗಿದೆ. ಸಿದ್ದರಾಮಯ್ಯ ಅವರಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಆಸಕ್ತಿ ಇಲ್ಲ. ಆದ್ದರಿಂದ 371 (ಜೆ) ಕಾಯ್ದೆಯಡಿ ಮೀಸಲಾತಿ ನೀಡದೆ, ನೇಮಕಾತಿಗೆ ತಡೆ ಬರುವಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.