ADVERTISEMENT

ಅಮಾನತು ಆದೇಶ ರದ್ದು

​ಪ್ರಜಾವಾಣಿ ವಾರ್ತೆ
Published 22 ಮೇ 2017, 6:58 IST
Last Updated 22 ಮೇ 2017, 6:58 IST

ಮಡಿಕೇರಿ: ‘ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ಅವರ ಅಮಾನತು ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ರದ್ದುಗೊಳಿಸಿ ಆದೇಶಿಸಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾಹಿತಿ ನೀಡಿದರು.

‘ಸೋಮವಾರಪೇಟೆ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರ ಚುನಾವಣೆ ವೇಳೆ ಪಕ್ಷ ವಿರೋಧಿ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಲೋಕೇಶ್ ಅವರನ್ನು ಅಮಾನತು ಮಾಡಲಾಗಿತ್ತು. ಆದರೆ, ಪಕ್ಷದ ಮುಖಂಡರು ಮತ್ತೊಮ್ಮೆ ಚರ್ಚಿಸಿ ಅಮಾನತು ಆದೇಶವನ್ನು ರದ್ದು ಮಾಡಿದ್ದಾರೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

‘ಮುಂಬರುವ ಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಕ್ಷದ ಅಡಿಯಲ್ಲಿ ಕೆಲಸ ಮಾಡುವ ನಾಯಕರು, ಕಾರ್ಯಕರ್ತರು ಹೈಕಮಾಂಡ್‌ ಆದೇಶಕ್ಕೆ ಬದ್ಧರಾಗಿರಬೇಕು. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ; ಪಕ್ಷ ನಿಷ್ಠೆ, ಗೌರವ ಕೊಡುವ ಕೆಲಸ ಮುಂದಿನ ದಿನಗಳಲ್ಲಿ ಮಾಡಬೇಕು’ ಎಂದು ರಮೇಶ್ ಎಚ್ಚರಿಸಿದರು.

ಕಂದಾಯ ಸಚಿವ ಭೇಟಿ: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ವಾರದೊಳಗೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮಡಿಕೇರಿ, ಕುಶಾಲನಗರ, ವಿರಾಜಪೇಟೆ ಭಾಗಗಳಲ್ಲಿ 94‘ಸಿ’ ಅಡಿಯಲ್ಲಿ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಕ್ಷದ ಮುಖಂಡರಾದ ತೆನ್ನಿರ ಮೈನಾ, ಪ್ರಕಾಶ್ ಆಚಾರ್ಯ, ಟಿ.ಎಚ್.ಉದಯ ಕುಮಾರ್, ಕೆ.ಎಂ.ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.