ADVERTISEMENT

ಒತ್ತುವರಿ ಭೂಮಿ ತೆರವಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2016, 8:54 IST
Last Updated 23 ಡಿಸೆಂಬರ್ 2016, 8:54 IST

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸಿ, ಒತ್ತುವರಿ ಭೂಮಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಜಿಲ್ಲೆಯಲ್ಲಿನ ಮೂಲ ನಿವಾಸಿ ಗಿರಿಜನರು, ಪರಿಶಿಷ್ಟರು, ನಿರ್ಗತಿಕರಿಗೆ ಪುನರ್ವಸತಿ ಕಲ್ಪಿಸಬೇಕು. ಮುಂದಿನ 5೦ ವರ್ಷಗಳಿಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಭೂಮಿ ಅಗತ್ಯ. ಆದ್ದರಿಂದ ಸರ್ಕಾರಿ ಭೂಮಿಯನ್ನು ಗುರುತಿಸಬೇಕು. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ಹೇಳಿದರು.

ಜಿಲ್ಲೆಯ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಮಾಡಿ ತಮ್ಮ ವ್ಯಾಪ್ತಿಯಲ್ಲಿನ ಬುಡಕಟ್ಟು ಹಾಗೂ ಪರಿಶಿಷ್ಟರನ್ನು ಗುರುತಿಸಿ ನಿವೇಶನ ರಹಿತರಿಗೆ, ವಸತಿ ರಹಿತರ ಪಟ್ಟಿ ಮಾಡಿ ನಿವೇಶನ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಬುಡಕಟ್ಟು ಕುಟುಂಬಗಳು, ನಿರ್ಗತಿಕರು ಹಾಗೂ ಪರಿಶಿಷ್ಟರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿ. ಆದರೆ, ಆ ಕೆಲಸವನ್ನು ಗ್ರಾಮ ಪಂಚಾಯಿತಿಗಳು ಮಾಡುತ್ತಿಲ್ಲ. ಐಟಿಡಿಪಿ ಇಲಾಖೆಯತ್ತ ಬೆರಳು ತೋರಿಸುತ್ತಾರೆ ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ 50, 53ರಡಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಸಂಬಂಧಿಸಿದಂತೆ ಡಿ.31ರೊಳಗೆ ವಿಲೇವಾರಿ ಮಾಡಬೇಕು. ಈ ಬಗ್ಗೆ ಕಂದಾಯ ಸಚಿವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ತ್ವರಿತವಾಗಿ ಅರ್ಜಿಗಳ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ಕ್ರಮ ಎದುರಿಸುವಂತೆ ತಹಶೀಲ್ದಾರ್‌ಗೆ ಎಚ್ಚರಿಕೆ ನೀಡಿದರು.

ಅಕ್ರಮ–ಸಕ್ರಮ ಯೋಜನೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಸಂಬಂಧ ಪ್ರತಿ ಶನಿವಾರ ಸಭೆ ಮಾಡುವಂತೆ ನಿರ್ದೇಶನ ನೀಡಲಾಗಿತ್ತು. ಆದರೆ, ಎಷ್ಟು ಸಭೆಗಳು ಆಗಿವೆ. ಮಾಹಿತಿ ಒದಗಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. 

ಈಗಾಗಲೇ ತಾಲ್ಲೂಕು ಪಂಚಾಯಿತಿಗೆ ನೀಡಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಬೇಕು. ಅತಿಕ್ರಮವಾಗಿದ್ದಲ್ಲಿ ಒಂದು ತಿಂಗಳೊಳಗೆ ತೆರವುಗೊಳಿಸುವಂತೆ ತಾಲ್ಲೂಕು ಪಂಚಾಯಿತಿ ಇಒಗಳಿಗೆ  ನಿರ್ದೇಶನ ನೀಡಿದರು.   

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ಈಗಾಗಲೇ ಕಂದಾಯ ಇಲಾಖೆಯಿಂದ ಸರ್ಕಾರಿ ಭೂಮಿಯನ್ನು ಗುರುತಿಸಿ ತಾಲ್ಲೂಕು ಪಂಚಾಯಿತಿಗೆ ಭೂಮಿಯನ್ನು ನೀಡಿದರೂ ಅದನ್ನು ಸಂರಕ್ಷಣೆ ಮಾಡಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.    

ಜಿಲ್ಲೆಯಲ್ಲಿ ನಿವೇಶನ ರಹಿತ ಕುಟುಂಬಗಳ ನಿಖರ ಮಾಹಿತಿಯನ್ನು ಒದಗಿಸಬೇಕು. ಈಗಾಗಲೇ ಒದಗಿಸಲಾಗಿರುವ ಭೂಮಿಯನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. 

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರು, ಈಗಾಗಲೇ ಹಲವು ಕಡೆಗಳಲ್ಲಿ ಭೂಮಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ತಹಶೀಲ್ದಾರ್‌ ಕುಸುಮಾ, ಮಹದೇವಸ್ವಾಮಿ, ಕೃಷ್ಣ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಡ್ನೇಕರ್, ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಷಂಶುದ್ದೀನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.