ADVERTISEMENT

ಜಿ.ಪಂ.ಗೆ ನೂತನ ಸಾರಥಿ ಹರೀಶ್

ಉಪಾಧ್ಯಕ್ಷರಾಗಿ ಲೋಕೇಶ್ವರಿ ಗೋಪಾಲ್ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2016, 8:31 IST
Last Updated 30 ಏಪ್ರಿಲ್ 2016, 8:31 IST
ಕೊಡಗು ಜಿಲ್ಲಾ ಪಂಚಾಯಿತಿಗೆ ನೂತನವಾಗಿ ಅವಿರೋಧ ಆಯ್ಕೆಯಾದ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಅಭಿನಂದಿಸಿದರು
ಕೊಡಗು ಜಿಲ್ಲಾ ಪಂಚಾಯಿತಿಗೆ ನೂತನವಾಗಿ ಅವಿರೋಧ ಆಯ್ಕೆಯಾದ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಅಭಿನಂದಿಸಿದರು   

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿ.ಎ. ಹರೀಶ್ ಮತ್ತು ಉಪಾಧ್ಯಕ್ಷರಾಗಿ ಲೋಕೇಶ್ವರಿ ಗೋಪಾಲ್ ಅವಿರೋಧ ಆಯ್ಕೆಯಾದರು.
 
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಎ.ಎಂ. ಕುಂಜಪ್ಪ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹೆಸರನ್ನು ಪ್ರಕಟಿಸಿದರು.

ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿ.ಎ. ಹರೀಶ್ ಅವರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹಾಗೆಯೇ ಸಾಮಾನ್ಯ (ಮಹಿಳೆ) ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಲೋಕೇಶ್ವರಿ ಗೋಪಾಲ್ ಅವರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.      

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಅವಧಿ 5 ವರ್ಷದವರೆಗೆ ಇದ್ದು, 2016ರ ಏ.29ರಿಂದ 2021ರ ಏ.28ರವರೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕುಂಜಪ್ಪ ತಿಳಿಸಿದರು. 

ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎ. ಹರೀಶ್ ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯ ಎಲ್ಲಾ ಸದಸ್ಯರು ಕೈಜೋಡಿಸುವಂತೆ ಮನವಿ ಮಾಡಿದರು.ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕರಿಸುವಂತೆ ಕೋರಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ್ ಸೇರಿದಂತೆ ಹಲವು ನೂತನ ಸದಸ್ಯರು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. 

ನೂತನ ಅಧ್ಯಕ್ಷ – ಉಪಾಧ್ಯಕ್ಷರನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯಿತಿ ಸದಸ್ಯರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.