ADVERTISEMENT

ನಿವೇಶನ, ವಸತಿ ರಹಿತರ ನೋಂದಣಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2017, 6:50 IST
Last Updated 17 ಜುಲೈ 2017, 6:50 IST

ಮಡಿಕೇರಿ: ‘ಕೊಡಗು ಜಿಲ್ಲೆಯಲ್ಲಿ ನಿವೇಶನ ಹಾಗೂ ವಸತಿ ರಹಿತರು ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದ್ದು, ಇದುವರೆಗೂ 300 ಮಂದಿ ಮಾತ್ರ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ಜಿಲ್ಲಾಧಿಕಾರಿ ರಿಚರ್ಡ್‌ ವಿನ್ಸೆಂಟ್ ಡಿಸೋಜ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲಾಡಳಿತವು ನಿವೇಶನ ರಹಿತರಿಗೆ ಒಂದು ಸಾವಿರ ನಿವೇಶನ ಒದಗಿಸಲು ಬದ್ಧವಾಗಿದೆ. ಆದರೆ, ನಿವೇಶನ ಹಾಗೂ ವಸತಿ ರಹಿತರು ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ನಿವೇಶನ ಹಾಗೂ ವಸತಿ ರಹಿತರು ತಮ್ಮ ಹೆಸರು, ವಿಳಾಸ, ಪಡಿತರ ಚೀಟಿ ಸೇರಿದಂತೆ ಯಾವುದಾದರೂ  ವಾಸದ ದೃಢೀಕರಣದ ಪ್ರತಿ ನೀಡಬೇಕಿದೆ. ಅದನ್ನೂ ಒದಗಿಸಲು ಸಾಧ್ಯವಿಲ್ಲದಿದ್ದರೆ ಹೇಗೆ’ ಎಂದು ಪ್ರಶ್ನಿಸಿದರು.

‘ಪ್ರತಿ ಹೋಬಳಿ ಕೇಂದ್ರಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗದ ಅಗತ್ಯವಿದೆ. ಕಂದಾಯ ಇಲಾಖೆ ಅಧಿಕಾರಿಗಳಿಗೆ ಕನಿಷ್ಠ 25ರಿಂದ 50 ಗುಂಟೆ ಜಾಗವನ್ನು ಗುರುತಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಆದಷ್ಟು ಶೀಘ್ರವೇ ಜಾಗ ಗುರುತಿಸಿ ವರದಿ ನೀಡಬೇಕು. ಆರ್ಜಿ ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಗುರುತಿಸಿದರೂ ಇನ್ನೂ ಆರ್‌ಟಿಸಿ ಪಡೆಯದಿದ್ದರೆ ಹೇಗೆ? ಎಂದು ಜಿಲ್ಲಾಧಿಕಾರಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ‘ಭೂಮಿ ಸೇರಿದಂತೆ ಇತರೆ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಸಿಕೊಳ್ಳಲು ಸಮಾಜ ಕಲ್ಯಾಣಾಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು’ ಎಂದು ಸಲಹೆ ಮಾಡಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಇಒ ಪಡ್ನೇಕರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ, ಚನ್ನಬಸವಯ್ಯ, ಮಂಜುನಾಥ, ಜಗದೀಶ್ ಹಾಜರಿದ್ದರು.

**

ಸಚಿವ ಎಂ.ಆರ್. ಸೀತಾರಾಂ ಅವರ ಅಧ್ಯಕ್ಷತೆಯಲ್ಲಿ ಮುಂದಿನ ತಿಂಗಳು ಜಿಲ್ಲೆಯ ಬಡವರಿಗೆ 94‘ಸಿ’ ಅಡಿ ಒಂದು ಸಾವಿರಕ್ಕೂ ಹೆಚ್ಚು ಹಕ್ಕುಪತ್ರ ವಿತರಿಸಲಾಗುವುದು.
–ರಿಚರ್ಡ್‌ ವಿನ್ಸೆಂಟ್‌ ಡಿಸೋಜ, ಜಿಲ್ಲಾಧಿಕಾರಿ

**

ಹಾರಂಗಿ ಹಿನ್ನೀರಿನ ಪ್ರದೇಶದಲ್ಲಿ ಹಿಂದುಳಿದ ಸಮುದಾಯಕ್ಕೆ ಸೇರಿದ ಕುಟುಂಬಗಳು ಟೆಂಟ್‌ನಲ್ಲಿ ವಾಸ ಮಾಡುತ್ತಿವೆ. ಅವರಿಗೆ ನಿವೇಶನ ಒದಗಿಸುವುದು ಅಗತ್ಯ.
–ಕೆ.ಟಿ. ದರ್ಶನ್, ಹಿರಿಯ ಸಹಾಯಕ ನಿರ್ದೇಶಕ, ಮೀನುಗಾರಿಕೆ ಇಲಾಖೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.