ADVERTISEMENT

ಪ್ಲಾಸ್ಟಿಕ್‌ ಮಾರಾಟ: ಪರವಾನಗಿ ರದ್ದು

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 11:28 IST
Last Updated 23 ಮಾರ್ಚ್ 2018, 11:28 IST

ಸೋಮವಾರಪೇಟೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳ ಹಿಂದೆಯೇ ಪ್ಲಾಸ್ಟಿಕ್ ಮಾರಾಟ ನಿಷೇಧಿಸಿದ್ದರೂ ಕೆಲವೆಡೆ ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್‌ ಮಾರಾಟ ಹಾಗೂ ಬಳಸಿದಲ್ಲಿ ಪರವಾನಗಿ ರದ್ದು ಮಾಡಲಾಗುವುದು ಎಂದು ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್ ಗುರುವಾರ ಎಚ್ಚರಿಸಿದರು.

ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸ ಲಾಗುವುದು ಎಂದು ಹೇಳಿದರು.

ಕಳೆದ ಹಲವಾರು ವರ್ಷಗಳಿಂದ ಪಟ್ಟಣದ ಜನತಾ ಕಾಲೊನಿಯಲ್ಲಿ ವಾಸ ಮಾಡುತ್ತಿರುವವರಿಗೆ ಜಾಗದ ಹಕ್ಕುಪತ್ರ ಇಲ್ಲದೇ ಇರುವುದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಪಂಚಾಯಿತಿಯಿಂದಲೇ ಫಲಾನುಭವಿಗಳ ಪಟ್ಟಿ ತಯಾರಿಸಿ ಹಕ್ಕುಪತ್ರಕ್ಕಾಗಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ADVERTISEMENT

ನಗರೋತ್ಥಾನ ಯೋಜನೆ ಅಡಿ ಪಟ್ಟಣ ಪಂಚಾಯಿತಿಗೆ ₹ 2 ಕೋಟಿ ಅನುದಾನ ಬಂದಿದ್ದು, ಇದಕ್ಕೆ ಕ್ರಿಯಾ ಯೋಜನೆ ತಯಾರಿಸುವಂತೆ ಪೌರಾಡಳಿತ ಇಲಾಖೆಯಿಂದ ನಿರ್ದೇಶನ ಬಂದಿದೆ. ಅದರಂತೆ ನಗರೋತ್ಥಾನ ಯೋಜನೆಯ 3ನೇ ಹಂತದ ವಿಶೇಷ ಅನುದಾನದಲ್ಲಿ ₹ 35 ಲಕ್ಷ ಹಣವನ್ನು ಪರಿಶಿಷ್ಟ ಜಾತಿಯವರ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ₹ 13.90 ಲಕ್ಷ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ₹ 30 ಲಕ್ಷ, ರಸ್ತೆ ಮತ್ತು ಚರಂಡಿ ಕಾಮಗಾರಿಗೆ ₹ 84.77 ಲಕ್ಷ, ಮಳೆ ನೀರು ಚರಂಡಿ ಕಾಮಗಾರಿಗೆ ₹ 11.33 ಲಕ್ಷ, ಇತರೆ ಅಭಿವೃದ್ಧಿ ಕಾಮಗಾರಿಗೆ ₹ 25 ಲಕ್ಷ ಹಣವನ್ನು ಕಾಯ್ದಿರಿಸಿ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಸುಷ್ಮಾ ಸುಧಾಕರ್, ಸದಸ್ಯರಾದ ಸುಶೀಲಾ, ಲೀಲಾ ನಿರ್ವಾಣಿ, ಬಿ.ಎಂ. ಈಶ್ವರ್, ಬಿ.ಎಂ. ಸುರೇಶ್, ಮುಖ್ಯಾಧಿಕಾರಿ ನಾಚಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.