ADVERTISEMENT

ಬೇಡಿಕೆ ಈಡೇರಿಸಲು ಸರ್ಕಾರ ವಿಫಲ

ಅಂಗನವಾಡಿ ಕಾರ್ಯಕರ್ತರ ಹೋರಾಟ ಬೆಂಬಲಿಸಿ ಪ್ರತಿಭಟನೆ; ಆರೋಪ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 7:21 IST
Last Updated 24 ಮಾರ್ಚ್ 2017, 7:21 IST

ಕುಶಾಲನಗರ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಪ್ರತಿಭಟನೆ ಬೆಂಬಲಿಸಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ಕೈಗೊಂಡರು.

ಮಹಿಳಾ ಘಟಕದ ಅಧ್ಯಕ್ಷೆ ಸರಳಾ ರಾಮಣ್ಣ ನೇತೃತ್ವದಲ್ಲಿ, ಕಾರ್ಯಪ್ಪ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಹಾಗೂ ಅಂಗನವಾಡಿ ಕಾರ್ಯಕರ್ತರ ಪರ ಘೋಷಣೆ ಕೂಗಿದರು.

ಜಿ.ಪಂ.ಸದಸ್ಯೆ ಕೆ.ಆರ್.ಮಂಜುಳಾ, ಬೇರೆ ರಾಜ್ಯಗಳಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ನೀಡುತ್ತಿರುವ ಸೌಲಭ್ಯದ ಬಗ್ಗೆ ಅಧ್ಯಯನ ಮಾಡಬೇಕು. ಸರ್ಕಾರದ ಯೋಜನೆಗಳು, ಜನರ ನಡುವೆ ಅಂಗನವಾಡಿ ಕಾರ್ಯಕರ್ತರು ಕಾರ್ಯ ನಿರ್ವಹಿಸುವರು. ಇವರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ನಿರ್ಲಕ್ಷ್ಯ ಖಂಡನೀಯ ಎಂದರು.

ಕಾರ್ಯಪ್ಪ ವೃತ್ತದಿಂದ ರಥಬೀದಿ ಮೂಲಕ ನಾಡು ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಪ್ರಭಾರ ಉಪ-ತಹಶೀಲ್ದಾರ್ ನಂದಕುಮಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಪಾ ಜರ್ನಾರ್ದನ್‌, ಗುಡ್ಡೆಹೊಸೂರು ಗ್ರಾ.ಪಂ ಸದಸ್ಯೆ ಕವಿತಾ, ಮುಳ್ಳುಸೋಗೆ ಗ್ರಾ.ಪಂ.ಸದಸ್ಯೆ ರುದ್ರಾಂಬಿಕೆ, ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಕನಕಮಣಿ, ತಾಲ್ಲೂಕು ಘಟಕದ ಉಪಾಧ್ಯಕ್ಷೆ ನಿರ್ಮಲಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.