ADVERTISEMENT

ಭೂಮಿಯ ಸಂರಕ್ಷಣೆ ಆದ್ಯ ಕರ್ತವ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 10:11 IST
Last Updated 23 ಏಪ್ರಿಲ್ 2017, 10:11 IST

ಕುಶಾಲನಗರ:  ಸಕಲ ಜೀವಜಂತುಗಳಿಗೂ ಆಶ್ರಯ ತಾಣವಾಗಿರುವ ಭೂಮಿಯ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಹೇಳಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ಸರಕಾರಿ ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯಾ ಸ್ಫೋಟ ಹಾಗೂ  ಅವೈಜ್ಞಾನಿಕ ಅಭಿವೃದ್ಧಿಯಿಂದ ಶೇ 33ರಷ್ಟು ಇರಬೇಕಾದ ಅರಣ್ಯ ಪ್ರದೇಶ ನಾಶವಾಗಿ ಹೋಗುತ್ತಿದೆ. ಇದರೊಂದಿಗೆ ಪರಿಸರ ಅಸಮತೋಲನವಾಗಿ ಜೀವಜಂತುಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುವ ಸಂಭವ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಭೂ ಸಂರಕ್ಷಣೆ ಹಾಗೂ ಪರಿಸರ ಕಾಪಾಡುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಹೆಜ್ಜೆಯಿಡಬೇಕಾಗಿದೆ ಎಂದರು.

ದೇಶದಲ್ಲಿ ಹಲವಾರು ಕಾನೂನುಗಳು ಆಸ್ತಿತ್ವದಲ್ಲಿದ್ದು, ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳನ್ನು ಜಾರಿಗೆ ತರಲಾಗಿದೆ. ಪ್ರತಿಯೊಬ್ಬ ಪ್ರಜೆಯು ತಮ್ಮ ಹಕ್ಕು ಚಲಾಯಿಸುವುದರೊಂದಿಗೆ ಕರ್ತವ್ಯ ನಿಭಾಯಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.ಮಡಿಕೇರಿ ವಿಭಾಗ ಉಪಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ನಾಶವಾಗುತ್ತಿರುವುದು ವಿಷಾದ. ನೈಸರ್ಗಿಕ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತನೆ ಹರಿಸಬೇಕು.

ADVERTISEMENT

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಭೂಮಿಯ ಮಹತ್ವದ ಬಗ್ಗೆ ಹಾಗೂ ನಾಗರಿಕರ ಕರ್ತವ್ಯದ ಬಗ್ಗೆ ಮಾಹಿತಿ ಒದಗಿಸಿದರು. ವರ್ಷದ ಎಲ್ಲಾ ದಿನಗಳಲ್ಲಿಯೂ ಭೂಮಿಯ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕಾಗಿದೆ ಎಂದರು.ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಲಕ್ಷ್ಮಿದೇವಮ್ಮ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಆಡಳಿತಾಧಿಕಾರಿ ಲಿಂಗರಾಜು, ಕಾವೇರಿ ನದಿ ಜಾಗೃತಿ ಸಮಿತಿಯ ಸಂಚಾಲಕ ಚಂದ್ರಮೋಹನ್, ಡಿ.ಆರ್.ಸೋಮಶೇಖರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಜುನಾಥ್ ಉಪಸ್ಥಿತರಿದ್ದರು. ಇದೇ ಸಂದರ್ಭ ಕಾಲೇಜಿನ  ಆವರಣದಲ್ಲಿ ಭೂಮಿ ದಿವಸ ಅಂಗವಾಗಿ ಗಿಡಗಳನ್ನು ನೆಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.