ADVERTISEMENT

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2017, 9:07 IST
Last Updated 8 ಜುಲೈ 2017, 9:07 IST

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಬೆಟ್ಟಗೇರಿ ಗ್ರಾಮದಲ್ಲಿ ₹5 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಲತೀಫ್ ಈಚೆಗೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿ ಅವರು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿ.ಪಂ.ಅನುದಾನದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭ ದೊಡ್ಡಬೆಟ್ಟಗೇರಿಯಿಂದ ಚಿಕ್ಕಬೆಟ್ಟಗೇರಿವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಗೆ ಮೀಸಲಿಟ್ಟಿರುವ ₹5 ಲಕ್ಷ ಅನುದಾನದ ಜೊತೆಗೆ ಹೆಚ್ಚುವರಿಯಾಗಿ ₹10 ಲಕ್ಷ ಅನುದಾನವನ್ನು ಒದಗಿಸುವ ಮೂಲಕ ಪೂರ್ಣ ಪ್ರಮಾಣದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ADVERTISEMENT

ನಂತರ ಮಾದಪಟ್ಟಣ ಗ್ರಾಮದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿಯನ್ನು ಪರಿಶೀಲಿಸಿದ ಲತೀಫ್, ಗುಣಮಟ್ಟದ ಕಾಮಗಾರಿಯನ್ನು ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಜಿ.ಪಂ.ಮಾಜಿ ಸದಸ್ಯ ಆರ್.ಕೆ.ಚಂದ್ರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ, ಎಂಜಿನಿಯರ್ ಫಯಾಜ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.