ADVERTISEMENT

ಸಿದ್ದರಾಮಯ್ಯ ಅವರಿಂದ ದ್ವೇಷದ ರಾಜಕಾರಣ: ಆರೋಪ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 7:32 IST
Last Updated 22 ಆಗಸ್ಟ್ 2017, 7:32 IST

ಮಡಿಕೇರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುವ ಮೂಲಕ ರಾಜ್ಯದಲ್ಲಿ ಕೆಟ್ಟ ಸಂಸ್ಕೃತಿಯ ಆಡಳಿತ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಭಾರತೀಶ್ ದೂರಿದರು.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮುಗಿದು ಹೋಗಿರುವ ಡಿನೋಟಿಫೈ ಪ್ರಕರಣವನ್ನು ಎಸಿಬಿ ಮೂಲಕ ಮರು ತನಿಖೆಗೆ ಒಳಪಡಿಸುತ್ತಿರುವುದು ನೀಚ ರಾಜಕಾರಣ’ ಎಂದು ಆಪಾದಿಸಿದರು.

‘ಪ್ರವಾಸದ ಹೆಸರಿನಲ್ಲಿ ಶಾಲಾ ಮಕ್ಕಳಲ್ಲಿ ಜಾತಿಯ ವಿಷಬೀಜ ಬಿತ್ತಿದ್ದ ರಾಜ್ಯ ಸರ್ಕಾರ, ಒಂದು ಧರ್ಮವನ್ನು ಓಲೈಸಲು ಹಿಂದೂ ಸಮುದಾಯದ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತಿದೆ. ಗೋಹತ್ಯೆ ಮತ್ತು ಸಾಗಾಟಕ್ಕೆ ನಿರ್ಬಂಧವಿದ್ದರೂ, ನಿರಂತರವಾಗಿ ಇಂತಹ ಕೃತ್ಯಗಳು ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರೇ ಬೆಂಬಲ ನೀಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಬಿ. ರವಿ ಕುಶಾಲಪ್ಪ ಮಾತನಾಡಿ, ‘ಗಣೇಶೋತ್ಸವ ಆಚರಣೆಯನ್ನು ಹದ್ದು ಬಸ್ತಿನಲ್ಲಿರುವ ಪ್ರಯತ್ನಗಳು ನಡೆಯುತ್ತಿವೆ. ಧ್ವನಿವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲಿಸುವಂತೆ ಒತ್ತಡ ಹೇರಲಾಗುತ್ತಿದೆ’ ಎಂದು ಹೇಳಿದರು.

ವಕ್ತಾರ ನಾಪಂಡ ಎಂ. ಕಾಳಪ್ಪ, ‘ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳದಿರುವುದು ಖಂಡನೀಯ. ರಮೇಶ್ ಅವರಿಗೆ ನೀಡಿರುವ ಎಲ್ಲಾ ಹುದ್ದೆಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ಉಪಾಧ್ಯಕ್ಷ ಬಿ.ಕೆ. ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.