ADVERTISEMENT

‘ಸ್ವಚ್ಛತೆ ಕಡೆ ಗಮನ ಅತ್ಯಗತ್ಯ’

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಮೇ 2018, 13:22 IST
Last Updated 29 ಮೇ 2018, 13:22 IST

ಮಡಿಕೇರಿ: ಜೂನ್ 9ರ ತನಕ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೋಮವಾರ ಚಾಲನೆ ನೀಡಿದರು.

ನಗರದ ಜಿಲ್ಲಾ ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಯೋಜಿ ಸಿದ್ದ ಅತಿಸಾರ ಭೇದಿ ತೀವ್ರ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಆರೋಗ್ಯವಂತ ರಾಗಿರಬೇಕು. ಹಾಗಿದ್ದರೆ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ರಾಷ್ಟ್ರದಲ್ಲಿ ಸಾವಿರಾರು ಮಕ್ಕಳು ಅತಿಸಾರ ಭೇದಿಯಿಂದ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಸ್ವಚ್ಛತೆ ಕಡೆ ವಿಶೇಷ ಗಮನ ಹರಿಸಬೇಕಿದೆ. ಐದು ವರ್ಷದೊಳಗಿನ ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಅಗತ್ಯವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ನಾನಾ ಇಲಾಖೆಗಳು ಕೈಜೋಡಿಸಬೇಕಿದೆ’ ಎಂದು ಹೇಳಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾತನಾಡಿ, ‘ಅತಿಸಾರ ಭೇದಿಯಿಂದ ಸಾವನ್ನಪ್ಪುವುದನ್ನು ನಿಯಂತ್ರಣ ಮಾಡಲು ಮಕ್ಕಳ ದೇಹದಲ್ಲಿ ನೀರಿನಾಂಶ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಭೇದಿಯಾದ ತಕ್ಷಣ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಬೇಕು’ ಎಂದು ಸಲಹೆ ನೀಡಿದರು.

ಆರ್‌ಸಿಎಚ್ ಅಧಿಕಾರಿ ಡಾ.ನಿಲೇಶ್, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ವಿಶಾಲ್, ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಎ.ಸಿ. ಶಿವಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಪಾರ್ವತಿ, ಸ್ತ್ರೀರೋಗ ತಜ್ಞ ಡಾ. ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.