ADVERTISEMENT

9ರಿಂದ ದ್ವಿತೀಯ ಪಿಯು ಪರೀಕ್ಷೆ

ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ರಿಚರ್ಡ್‌ ವಿನ್ಸೆಂಟ್‌ ಡಿಸೋಜ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2017, 6:41 IST
Last Updated 3 ಮಾರ್ಚ್ 2017, 6:41 IST

ಮಡಿಕೇರಿ:  ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಇದೇ 9ರಿಂದ 27ರವರೆಗೆ ನಡೆಯಲಿದ್ದು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ  ರಿಚರ್ಡ್‌ ವಿನ್ಸೆಂಟ್‌ ಡಿಸೋಜ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ನ್ಯೂನತೆಗಳು ಬಾರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿಯ ಜೀವನ ನಿರ್ಧರಿಸುವ ಪ್ರಮುಖ ಘಟ್ಟವಾಗಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಪರೀಕ್ಷೆ ನಡೆಸಬೇಕು.

ಪರೀಕ್ಷೆಯನ್ನು ಸರಿಯಾದ ಸಮಯಕ್ಕೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರ ಅಳವಡಿಸುವುದು, ಕುಡಿಯುವ ನೀರು ವ್ಯವಸ್ಥೆ ಮಾಡುವುದು, ಉತ್ತಮ ಪೀಠೋಪಕರಣ  ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ದ್ವಿತೀಯ ಪಿಯು ಪರೀಕ್ಷೆ ಸಂಬಂಧ ಅಗತ್ಯ ಬಂದೋಬಸ್ತ್‌ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ದ್ವಿತೀಯ ಪಿಯು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕೈಜೋಡಿಸಿ ಎಂದು ಕೋರಿದರು. ಪ್ರಶ್ನೆ ಪತ್ರಿಕೆ ತರುವುದು, ಖಜಾನೆಯಲ್ಲಿ ಭದ್ರ ಪಡಿಸುವುದು, ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್.ಬಸವರಾಜು, ತಹಶೀಲ್ದಾರ್ ಕುಸುಮಾ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಪಾಂಡು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಇತತರು ಇದ್ದರು.

ಜಿಲ್ಲೆಯಲ್ಲಿ ಒಟ್ಟು  16 ಕೇಂದ್ರಗಳಲ್ಲಿ ಪರೀಕ್ಷೆ
ಮಡಿಕೇರಿ:  ಜಿಲ್ಲೆಯಲ್ಲಿ
ಒಟ್ಟು 16 ಪರೀಕ್ಷಾ ಕೇಂದ್ರಗಳಿವೆ. ಅವುಗಳು– ಮಡಿಕೇರಿ ತಾಲ್ಲೂಕಿನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜು, ನಾಪೋಕ್ಲುವಿನ ಸರ್ಕಾರಿ ಪದವಿ ಪೂರ್ವ ಕಾಲೇಜು.

ADVERTISEMENT

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪದ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು.

ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ  ಪದವಿ ಪೂರ್ವ ಕಾಲೇಜು, ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.