ADVERTISEMENT

ಅಕ್ರಮದ ವಿಚಾರಣೆ ಭಯ: ಅಧಿಕಾರಿಗಳ ಗೈರು

​ಪ್ರಜಾವಾಣಿ ವಾರ್ತೆ
Published 26 ಮೇ 2017, 5:28 IST
Last Updated 26 ಮೇ 2017, 5:28 IST
ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಸ್ಥಾಯಿ ಸಮಿತಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಮಾತನಾಡಿದರು
ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಸ್ಥಾಯಿ ಸಮಿತಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಮಾತನಾಡಿದರು   

ಕೋಲಾರ: ‘ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಭಾರಿ ಅಕ್ರಮಗಳು ನಡೆದಿದ್ದು, ಈ ಬಗ್ಗೆ ವಿಚಾರಣೆ ನಡೆಸುತ್ತಾರೆಂಬ ಭಯದಿಂದ ಅಧಿಕಾರಿಗಳು ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಸ್ಥಾಯಿ ಸಮಿತಿ ಸಭೆಗೆ ಗೈರಾಗಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯಿತಿಯ 2016-–17ನೇ ಸಾಲಿನ ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಲೆಕ್ಕ ಪರಿಶೋಧನೆ ಸಭೆಯ ಸಂಬಂಧ ಕಳೆದ 10 ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳಿಗೆ 3 ಬಾರಿ ಮಾಹಿತಿ ಕಳುಹಿಸಲಾಗಿದೆ’ ಎಂದರು.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಕಾರ್ಯ ಒತ್ತಡದಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ ಕಾರ್ಯದರ್ಶಿಗಳು ಅಥವಾ ಕರ ವಸೂಲಿಗಾರರಿಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬರಲು ಅವಕಾಶ ನೀಡಲಾಗಿತ್ತು. ಆದರೆ, ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳ ಪೈಕಿ 10 ಪಂಚಾಯಿತಿಗಳ ಅಧಿಕಾರಿಗಳು ಮಾತ್ರ ಸಭೆಗೆ ಬಂದಿದ್ದಾರೆ. ಇನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಬಹುಪಾಲು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸಭೆಗೆ ಗೈರಾಗಿದ್ದಾರೆ’ ಎಂದು ಕಿಡಿಕಾರಿದರು.

ADVERTISEMENT

‘ಅಧಿಕಾರಿಗಳು ಇಷ್ಟು ಪ್ರಮಾಣದಲ್ಲಿ ಗೈರಾಗಿರುವುದನ್ನು ಗಮನಿಸಿದರೆ ಭಾರಿ ಅಕ್ರಮಗಳು ನಡೆದಿರುವ ಅನುಮಾನವಿದೆ. ಅಧಿಕಾರಿಗಳು ಸಭೆಗೆ ಬಂದಿಲ್ಲವೆಂದು ಸುಮ್ಮನಿರಲು ಸಾಧ್ಯವಿಲ್ಲ. ಪ್ರತಿ ಗ್ರಾಮ ಪಂಚಾಯಿತಿಗೆ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಲೆಕ್ಕಾಧಿಕಾರಿಯನ್ನು ಕಳುಹಿಸಿ ಪರಿಶೀಲನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಹಾಯಧನ ವಿತರಣೆ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಮಾತನಾಡಿ, ‘ತೋಟಗಾರಿಕೆ ಮಿಷನ್‌ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಾಲ್ಲೂಕಿಗೆ ₹ 60 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ₹ 58 ಲಕ್ಷ ವೆಚ್ಚವಾಗಿದೆ. ಮಾವು, ಬಾಳೆ, ದ್ರಾಕ್ಷಿ, ಸಪೋಟಾದಂತಹ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರಿಗೆ ಸಹಾಯಧನ ವಿತರಿಸಲಾಗಿದೆ. ಮಾವು, ತೆಂಗಿನ ಗಿಡ ನಾಟಿ ಮಾಡಿದವರಿಗೆ ಹಾಗೂ ಕೃಷಿ ಆಧಾರಿತ ಯಂತ್ರಗಳನ್ನು ಖರೀದಿಸಿದವರಿಗೆ ಸಹಾಯಧನ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ವಿವಿಧ ಯೋಜನೆಗಳಡಿ ತಾಲ್ಲೂಕಿಗೆ ₹ 2.16 ಲಕ್ಷ ಅನುದಾನ ಬಿಡುಗಡೆಆಗಿದ್ದು, ಇದರಲ್ಲಿ ಶೇ 98ರಷ್ಟು ಅನುದಾನವನ್ನು ಬಳಕೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಈಗಾಗಲೇ 1,374 ರೈತರು ಕೃಷಿ ಹೊಂಡ ನಿರ್ಮಿಸಿದ್ದು, ಈ ಫಲಾನುಭವಿಗಳಿಗೆ ಬಿಲ್ ಪಾವತಿಸುವ ಜವಾಬ್ದಾರಿಯನ್ನು ಇಲಾಖೆಗೆ ವಹಿಸಿದೆ. ಕೃಷಿ ಹೊಂಡ ನಿರ್ಮಿಸಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಕಾಲಕ್ಕೆ ಬಿಲ್ ಪಾವತಿಸಲಾಗುತ್ತದೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ ವಿವರಿಸಿದರು.

‘ಬಳಕೆಯಾಗದೆ ಉಳಿದಿರುವ ಅನುದಾನದಲ್ಲಿ ಬಿತ್ತನೆ ಬೀಜ, ಗೊಬ್ಬರ ಖರೀದಿಸಿ ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಟಾರ್ಪಲ್‌ಗಳು ಸರಬರಾಜಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರವೇ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.

‘ತಾಲ್ಲೂಕು ಪಂಚಾಯಿತಿ ವತಿಯಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದೇ ದಿನ ಟಾರ್ಪಲ್‌ ಕೊಡಲು ಸಿದ್ಧತೆ ಮಾಡಿಕೊಳ್ಳಿ’ ಎಂದು ಅಧ್ಯಕ್ಷ ಆಂಜಿನಪ್ಪ ಸೂಚಿಸಿದರು.

ಅನುದಾನ ಉಳಿದಿದೆ: ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕಿರಣ್ ಮಾತನಾಡಿ, ‘ಸರ್ಕಾರದಿಂದ ತಾಲ್ಲೂಕಿಗೆ ₹ 46 ಲಕ್ಷ ಅನುದಾನ ಬಂದಿದ್ದು, ಇದರಲ್ಲಿ ₹ 4 ಲಕ್ಷ ಅನುದಾನ ಬಳಕೆಯಾಗದೆ ಉಳಿದಿದೆ. ಅಂಗನವಾಡಿ ಕಟ್ಟಡಗಳ ನಿರ್ವಹಣೆ, ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ, ಪೌಷ್ಟಿಕ ಆಹಾರ ಕಾರ್ಯಕ್ರಮಕ್ಕೆ ಈ ಅನುದಾನ ಮೀಸಲಿದೆ’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶ ಬಾಲಾಜಿ ಮಾತನಾಡಿ, ‘ಇಲಾಖೆಗೆ ₹ 2.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಶೇ 90ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಲಯ ಕಟ್ಟಡಗಳ ನಿರ್ವಹಣೆ, ವಿದ್ಯಾರ್ಥಿವೇತನ, ಹಾಸ್ಟೆಲ್‌ಗಳಿಗೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ ಅನುದಾನ ವೆಚ್ಚ ಮಾಡಲಾಗಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಆಂಜಿನಪ್ಪ, ‘ತಾಲ್ಲೂಕಿನಲ್ಲಿ ಎಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಗಿದೆ ಎಂಬ ಮಾಹಿತಿ ಕೊಡಿ. ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಅನುದಾನಕ್ಕೆ ಶೀಘ್ರವೇ ಪ್ರಸ್ತಾವ ಸಲ್ಲಿಸಿ’ ಎಂದು ಸೂಚನೆ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಪ್ಪ, ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸದಸ್ಯರಾದ ಮಂಜಮ್ಮ, ಆಂಜಿನಮ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.