ADVERTISEMENT

ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 7:08 IST
Last Updated 14 ಜುಲೈ 2017, 7:08 IST

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ (ಡಿಎಚ್‌ಒ) ಎದುರು ಗುರುವಾರ ಧರಣಿ ನಡೆಸಿದರು.

ಜಿಲ್ಲೆಯ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಸಲಕರಣೆಗಳಿಲ್ಲ. ಔಷಧ ಮಾತ್ರೆಗಳು ಸರಿಯಾಗಿ ಸರಬರಾಜಾಗುತ್ತಿಲ್ಲ. ಅಲ್ಲದೇ, ಸರ್ಕಾರಿ ವೈದ್ಯರು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಖಾಸಗಿಯಾಗಿ ಕ್ಲಿನಿಕ್‌ ನಡೆಸುತ್ತಾ ಹಣ ಮಾಡುತ್ತಿದ್ದಾರೆ ಎಂದು ಧರಣಿನಿರತರು ಆರೋಪಿಸಿದರು.

ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಡೆಂಗಿ ಮತ್ತು ಚಿಕೂನ್‌ ಗುನ್ಯಾ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಎಲ್ಲೆಡೆ ಸಾಂಕ್ರಾಮಿಕ ರೋಗ ಭೀತಿ ಮನೆ ಮಾಡಿದ್ದು, ಜನ ಆತಂಕಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೀಗಾಗಿ ಜನ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಾಗಿದೆ’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯ ಗಡಿ ಭಾಗಗಳಲ್ಲಿ ನಕಲಿ ವೈದ್ಯರ ಹಾವಳಿ ಮೇರೆ ಮೀರಿದೆ. ಈ ಸಂಗತಿ ಗೊತ್ತಿದ್ದರೂ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರಿಗೆ ಕಡಿವಾಣ ಹಾಕುತ್ತಿಲ್ಲ. ಸರ್ಕಾರಿ ಆಸ್ಪತ್ರೆ ವೈದ್ಯರು ರಕ್ತಪರೀಕ್ಷೆ, ಮೂತ್ರ ಪರೀಕ್ಷೆ, ಸ್ಕ್ಯಾನಿಂಗ್‌ಗೆ ಖಾಸಗಿ ನರ್ಸಿಂಗ್‌ ಹೋಂಗಳಿಗೆ ಹೋಗುವಂತೆ ಚೀಟಿ ಬರೆದು ಕೊಡುತ್ತಿದ್ದಾರೆ. ಅಧಿಕಾರಿಗಳು ಈ ಅವ್ಯವಸ್ಥೆಯನ್ನು ಮರೆಮಾಚಿ ಆರೋಗ್ಯ ಸಚಿವರ ದಾರಿ ತಪ್ಪಿಸುತ್ತಿದ್ದಾರೆ’ ಎಂದರು.

ಜೀವ ಭಯ: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಇಲ್ಲವಾಗಿದೆ. ಬಹುಪಾಲು ಆಸ್ಪತ್ರೆಗಳ ಕಟ್ಟಡಗಳು ಶಿಥಿಲಗೊಂಡಿದ್ದು, ರೋಗಿಗಳು ಜೀವ ಭಯದಲ್ಲಿ ಇರುವಂತಾಗಿದೆ. ರೋಗಿಗಳು ಹಣ ಕೊಟ್ಟರೆ ಮಾತ್ರ ವೈದ್ಯರು ಗುಣಮಟ್ಟದ ಚಿಕಿತ್ಸೆ ಕೊಡುತ್ತಾರೆ. ಅಧಿಕಾರಿಗಳು ಲಂಚದಾಸೆಗೆ ಖಾಸಗಿ ಆಸ್ಪತ್ರೆಗಳ ಜತೆ ಕೈಜೋಡಿಸಿದ್ದಾರೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಡೆಂಗಿ ಮತ್ತು ಚಿಕೂನ್‌ ಗುನ್ಯಾ ಹತೋಟಿಗೆ ವೈದ್ಯರು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಒತ್ತಾಯಿಸಿದರು. ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹರಿಕುಮಾರ್, ಸಂಚಾಲಕ ಕೆ. ಶ್ರೀನಿವಾಸಗೌಡ, ಮಹಿಳಾ ಘಟಕದ ಅಧ್ಯಕ್ಷೆ ನಳಿನಿ, ಸದಸ್ಯರಾದ ಉಮಾಗೌಡ, ವೆಂಕಟೇಶ್, ರಾಮುಶಿವಣ್ಣ, ಮಂಜುನಾಥ್‌, ಅಮರನಾರಾಯಣ,  ಕೃಷ್ಣೇಗೌಡ, ಆಂಜಿನಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.