ADVERTISEMENT

ಉಚಿತ ಬಸ್‌ ಪಾಸ್‌ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 7:11 IST
Last Updated 14 ಜುಲೈ 2017, 7:11 IST

ಕೋಲಾರ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಸರ್ಕಾರ ಉಚಿತ ಬಸ್‌ ಪಾಸ್ ಕೊಡಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯರು ತಾಲ್ಲೂಕಿನ ವೇಮಗಲ್‌ನಲ್ಲಿ ಗುರುವಾರ ಧರಣಿ ನಡೆಸಿದರು.

ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ಮಾಡಿದ ಧರಣಿನಿರತರು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಕೊಡುವಂತೆ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಾಸ್‌ ಕೊಡುವುದಾಗಿ ಘೋಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಎಲ್ಲಾ ವರ್ಗದ ವಿದ್ಯಾರ್ಥಿಗಳು ಸಮಾನರು. ಆದರೆ, ಸರ್ಕಾರ ವಿದ್ಯಾರ್ಥಿಗಳ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ. ಬಸ್‌ ಪಾಸ್‌ ನೆಪದಲ್ಲಿ ಜಾತಿಯ ವಿಷ ಬೀಜ ಬಿತ್ತುತ್ತಿದೆ. ದಲಿತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಕೊಡುವ ನಿರ್ಧಾರ ಸ್ವಾಗತಾರ್ಹ. ಈ ಸೌಲಭ್ಯವನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು’ ಎಂದು ಎಬಿವಿಪಿ ತಾಲ್ಲೂಕು ಘಟಕದ ಸಂಚಾಲಕ ಕೆ.ಎಸ್‌.ನವೀನ್‌ ಹೇಳಿದರು.

ADVERTISEMENT

‘ರಾಜ್ಯದೆಲ್ಲೆಡೆ ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸ್ಥಿತಿಯಲ್ಲಿ ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸುವುದು ಕಷ್ಟ. ಹೀಗಾಗಿ ಕೇರಳ ಮತ್ತು ತಮಿಳುನಾಡು ರಾಜ್ಯದ ಮಾದರಿಯಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಪಾಸ್‌ ಕೊಟ್ಟರೆ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ’ ಎಂದು ಅವರು ತಿಳಿಸಿದರು.

ಶಿಕ್ಷಣವು ಮಾರಾಟದ ಸರಕಾಗಿದೆ. ಆದರೂ ಗ್ರಾಮೀಣ ಭಾಗದ ಬಡ ರೈತರು ಬಡ್ಡಿ ಸಾಲ ಮಾಡಿ ಮಕ್ಕಳನ್ನು ಓದಿಸುತ್ತಿದ್ದಾರೆ. ಆದ ಕಾರಣ ಸರ್ಕಾರ ಉಚಿತ ಶಿಕ್ಷಣ, ಉಚಿತ ಪ್ರಯಾಣ ಬೇಡಿಕೆ ಈಡೇರಿಸುವ ಮೂಲಕ ವಿದ್ಯಾರ್ಥಿಗಳ ಪರ ನಿಲ್ಲಬೇಕು. ಇಲ್ಲವಾದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ ಎಂದು ಧರಣಿನಿರತರು ಎಚ್ಚರಿಕೆ ನೀಡಿದರು. ಎಬಿವಿಪಿ ತಾಲ್ಲೂಕು ಘಟಕದ ಸಹ ಸಂಚಾಲಕ ಗಜೇಂದ್ರ, ನಗರ ಘಟಕದ ಕಾರ್ಯದರ್ಶಿ ವಿಜಯ್‌, ಸದಸ್ಯರಾದ ಅರುಣ್, ಪ್ರವೀಣ್‌, ನಾಗರಾಜ್, ನಾಗೇಶ್, ಸತೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.