ADVERTISEMENT

ಕೆರೆಗಳ ಪುನಶ್ಚೇತನಕ್ಕೆ ಪ್ಯಾಕೇಜ್‌ ಘೋಷಿಸಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 6:51 IST
Last Updated 21 ಸೆಪ್ಟೆಂಬರ್ 2017, 6:51 IST

ಕೋಲಾರ: ‘ಜಿಲ್ಲೆಯ ಕೆರೆಗಳ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್‌.ರಮೇಶ್‌ಕುಮಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ನಗರದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ. ‘ರಾಜ್ಯದಲ್ಲೇ ಅತಿ ಹೆಚ್ಚು ಕೆರೆಗಳು ಜಿಲ್ಲೆಯಲ್ಲಿವೆ. ಆದರೆ, ಕಳೆದ ಕೆಲ ವರ್ಷಗಳಲ್ಲಿ ಬಹುಪಾಲು ಕೆರೆಗಳು ಹಾಗೂ ರಾಜಕಾಲುವೆಗಳು ಒತ್ತುವರಿಯಾಗಿವೆ. ಇದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗಿದೆ’ ಎಂದರು.

‘ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮೇಲ್ಮೈ ನೀರಿನ ಮೂಲಗಳಿಲ್ಲ. ಆದ ಕಾರಣ ಸಣ್ಣ ನೀರಾವರಿ ಇಲಾಖೆ ಮೂಲಕ ಕೆರೆಗಳ ಒತ್ತುವರಿ ತೆರವುಗೊಳಿಸಿ ದುರಸ್ತಿ ಮಾಡಿಸಿದರೆ ಅನುಕೂಲವಾಗುತ್ತದೆ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ 576 ಕೆರೆ ಹಾಗೂ ಕೆ.ಸಿ ವ್ಯಾಲಿ ಯೋಜನೆ ಮೂಲಕ 120 ಕೆರೆಗಳನ್ನು ತುಂಬಿಸಲು ಉದ್ದೇಶಿಸಲಾಗಿದೆ. ಬೆಂಗಳೂರಿನ ಇನ್ನೂ 10 ಟಿಎಂಸಿ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಜಿಲ್ಲೆಯ ಮತ್ತಷ್ಟು ಕೆರೆಗಳನ್ನು ತುಂಬಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಜಿಲ್ಲೆಯ ಕೆಜಿಎಫ್‌ನಲ್ಲಿರುವ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್‌ಗೆ (ಬಿಜಿಎಂಎಲ್) ಸೇರಿದ ಜಮೀನನ್ನು ಕೈಗಾರಿಕೆಗಳ ಸ್ಥಾಪನೆಗೆ ಬಳಸಿಕೊಳ್ಳಬೇಕು. ಇದರಿಂದ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತದೆ’ ಎಂದು ಸಲಹೆ ನೀಡಿದರು.

‘ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹಾದಿಯಲ್ಲಿ ಸಾಗುತ್ತಿದ್ದೇನೆ. ಆದರೆ, ಈಗಿನ ರಾಜಕೀಯ ವ್ಯವಸ್ಥೆ ಹೊಲಸಾಗಿದೆ. ಹಿಂದೆ ರಾಜಕೀಯ ನಾಯಕರಿಗೆ ಸಿಗುತ್ತಿದ್ದ ಗೌರವ ಈಗ ಸಿಗುತ್ತಿಲ್ಲ. ಮೋಸದ ಜಗತ್ತಿನಲ್ಲಿ ಮೌಲ್ಯಗಳು ಮಾಯವಾಗಿವೆ’ ಎಂದು ವಿಷಾದಿಸಿದರು.

ಬಯಲುಸೀಮೆಯ ಭಗೀರಥ: ‘ಬಯಲುಸೀಮೆ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆಯ ಪರಿಹಾರಕ್ಕೆ ಹಲವು ದಶಕಗಳಿಂದ ಹೋರಾಟ ನಡೆಯುತ್ತಿದೆ. ಹೋರಾಟ, ರಾಜಕೀಯ ಹಾಗೂ ಕೃಷಿಯಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ ಜನ ಮೊದಲಿಗರು. ಈ ಭಾಗದ ನೀರಿನ ಸಮಸ್ಯೆ ಅರಿತು ಎತ್ತಿನಹೊಳೆ ಮತ್ತು ಕೆ.ಸಿ.ವ್ಯಾಲಿ ಯೋಜನೆಗೆ ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಯಲುಸೀಮೆಯ ಭಗೀರಥ’ ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಬಣ್ಣಿಸಿದರು.

‘ಕೆಜಿಎಫ್‌ನಲ್ಲಿ ಬಿಜಿಎಂಎಲ್‌ಗೆ ಸೇರಿದ 12 ಸಾವಿರ ಎಕರೆ ಭೂಮಿ ಇದೆ. ಆ ಭೂಮಿಯನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಆ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಅನುಕೂಲವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.